ಉಡುಪಿ: ಉಡುಪಿ ತಾಲೂಕಿನ ಉಪ್ಪೂರು ಕೆ.ಜಿ.ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಶುಕ್ರವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಟ್ರಕ್‌ನ ಚಕ್ರದಡಿ ಸಿಲುಕಿಕೊಂಡ ಪರಿಣಾಮ ದೇಹ ಸಂಪೂರ್ಣವಾಗಿ ಛಿದ್ರಗೊಂಡಿದ್ದು, ರುಂಡ ದೇಹದಿಂದ ಬೇರ್ಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಅಪಘಾತದ ಭೀಕರತೆಯಿಂದ ಸ್ಥಳದಲ್ಲೇ ಸಾವನ್ನಪ್ಪಿರುವುದು ದೃಢಪಟ್ಟಿದೆ.

ಮೃತರು ಬ್ರಹ್ಮಾವರ ಮಟಪಾಡಿ ನಿವಾಸಿ ಎಂದು ಗುರುತಿಸಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿವೆ. ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಅವರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು.

ಮೃತದೇಹವನ್ನು ತೆರವುಗೊಳಿಸಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ಕಾರ್ಯದಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಹಾಗೂ ಬ್ರಹ್ಮಾವರದ ಅಂಬುಲೆನ್ಸ್ ಚಾಲಕರು ಸಹಕಾರ ನೀಡಿದರು.

ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



