Saturday, February 7, 2026

spot_img

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಉಡುಪಿಯಲ್ಲಿ ಜನಜಾಗೃತಿ ಜಾಥಾ

ಉಡುಪಿ : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿ.ಸಿ–ಪಿ.ಎನ್.ಡಿ.ಟಿ ಉಡುಪಿ ಜಿಲ್ಲೆ ಹಾಗೂ ನ್ಯೂಸಿಟಿ ನರ್ಸಿಂಗ್ ವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಗರದಲ್ಲಿ ಜನಜಾಗೃತಿ ಜಾಥಾವನ್ನು ಆಯೋಜಿಸಲಾಯಿತು. ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಾಥೆಗೆ ಚಾಲನೆ ನೀಡಿದರು.

 ಅವರು ಮಾತನಾಡಿ, ಹೆಣ್ಣು ಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವುದು, ಅವರ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಲಿಂಗ ತಾರತಮ್ಯವನ್ನು ಹೋಗಲಾಡಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು. ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಸಬಲೀಕರಣಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದ್ದು, ಅವರು ಸಶಕ್ತರಾಗಲು ಸಮಾಜವೇ ಸಹಕಾರ ನೀಡಬೇಕು ಎಂದು ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀರಾಮ್ ರಾವ್ ಅವರು ಕಾರ್ಯಕ್ರಮದ ಪ್ರಾಸ್ತಾವಿಕದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು. ಭ್ರೂಣ ಲಿಂಗ ಪತ್ತೆ ಮತ್ತು ತಡೆಗಟ್ಟುವ ಪಿ.ಸಿ–ಪಿ.ಎನ್.ಡಿ.ಟಿ ಕಾಯ್ದೆಯ ಕುರಿತು ಸವಿಸ್ತಾರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಕ್ವಾಲಿಟಿ ಆಶುರೆನ್ಸ್ ಸಮಾಲೋಚಕರು, ಮಣಿಪಾಲ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಜಾಥಾ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾಗಿ ಮುಖ್ಯ ರಸ್ತೆಯ ಮೂಲಕ ಸಾಗುತ್ತಾ ಮಣಿಪಾಲದಿಂದ ಕ್ವಾಯಿನ್ ಸರ್ಕಲ್ ವೃತ್ತಾಕಾರವಾಗಿ ಸಂಚರಿಸಿ ಮತ್ತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಪನಗೊಂಡಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles