Thursday, February 19, 2026

spot_img

ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಗೆ ಪೂರಕ ವಾತಾವರಣ ಅಗತ್ಯ : ನ್ಯಾ. ಮನು ಪಟೇಲ್

ಉಡುಪಿ : ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷಿತ ಹಾಗೂ ಭಯರಹಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಹೆಣ್ಣು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ, ಸಮಾನ ಹಕ್ಕುಗಳನ್ನು ಒದಗಿಸುವ ಮೂಲಕ ಅವರನ್ನು ಸಬಲರನ್ನಾಗಿ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ–ಬೇಟಿ ಪಡಾವೋ ಯೋಜನೆಯಡಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಪುರುಷರಷ್ಟೇ ಸಮಾನವಾಗಿ ಕಾಣಬೇಕೆಂದು ಕರೆ ನೀಡಿದ ಅವರು, ಲೈಂಗಿಕ ಕಿರುಕುಳದ ದೂರುಗಳಿಗೆ ಆಂತರಿಕ ದೂರು ಸಮಿತಿ ವ್ಯವಸ್ಥೆ ಇರುವುದನ್ನು ಮಹಿಳೆಯರು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದರು. ಜೀತ ಕಾರ್ಮಿಕ ಪದ್ಧತಿ ಸೇರಿದಂತೆ ಅಮಾನವೀಯ ಪದ್ಧತಿಗಳನ್ನು ನಿರ್ಮೂಲನೆ ಮಾಡಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಮಹಿಳೆ–ಪುರುಷರು ಸಮಾನರು ಎಂಬ ಮನೋಭಾವನೆ ಸಮಾಜದಲ್ಲಿ ಬೆಳೆದು ಬಂದಾಗ ಮಾತ್ರ ಲಿಂಗ ತಾರತಮ್ಯ ನಿವಾರಣೆಯಾಗುತ್ತದೆ ಎಂದು ಹೇಳಿದರು. ಹೆಣ್ಣು ಮಕ್ಕಳನ್ನು ಭ್ರೂಣಾವಸ್ಥೆಯಿಂದಲೇ ರಕ್ಷಿಸುವ ಅಗತ್ಯವಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೇಟಿ ಬಚಾವೋ–ಬೇಟಿ ಪಡಾವೋ ಕುರಿತ ಪೋಸ್ಟರ್ ಬಿಡುಗಡೆ ಮಾಡಲಾಯಿತು. ವಿವಿಧ ಕಾಯ್ದೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles