ಉಡುಪಿ : ಸುಮಾರು 15 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಹಾಗೂ 10ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಬೇಕಾಗಿದ್ದ ಎಲ್‌ಪಿಸಿ ಮತ್ತು ವಾರೆಂಟ್ ಆರೋಪಿಯನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಕುಂಭಾಶಿ ನಿವಾಸಿ ವಿಘ್ನೇಶ್ವರ ಐತಾಳ್ (56) ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ 2011ರಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ದಾಖಲಾದ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ 10ಕ್ಕೂ ಹೆಚ್ಚು ಬಾರಿ ವಾರೆಂಟ್ ಹೊರಡಿಸಲಾಗಿತ್ತು. ಅಲ್ಲದೆ ನ್ಯಾಯಾಲಯವು ಆತನನ್ನು “ತಲೆಮರೆಸಿಕೊಂಡ ಆರೋಪಿ” ಎಂದು ಘೋಷಿಸಿತ್ತು.

ಉಡುಪಿ ನಗರ ಠಾಣಾ ಪ್ರಭಾರ ನಿರೀಕ್ಷಕರಾದ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಭರತೇಶ್ ಕಂಕಣವಾಡಿ ಹಾಗೂ ಸಿಬ್ಬಂದಿಗಳಾದ ಪ್ರಸನ್ನ ಸಿ., ರಮೇಶ್ ಮತ್ತು ಆನಂದ ಅವರನ್ನೊಳಗೊಂಡ ತಂಡವು ವಿಶೇಷ ಕಾರ್ಯಾಚರಣೆ ನಡೆಸಿತು. ಬೆಂಗಳೂರು ನಗರದ ತಲಘಟ್ಟಪುರದ ಆರ್‌ಕೆ ಮಠ ಲೇಔಟ್‌ನಲ್ಲಿರುವ ಬಾಡಿಗೆ ಮನೆಯಲ್ಲಿ ತಂಗಿದ್ದ ಆರೋಪಿಯನ್ನು ಪೊಲೀಸರು ಮಾರ್ಚ್ 5ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಬಳಿಕ ಮಾರ್ಚ್ 6ರಂದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



