ಉಡುಪಿ : ಬಹರೈನ್, ಕತಾರ್, ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಮನವಿಯಂತೆ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಂಸತ್‌ನಲ್ಲಿ ಸಂಸದ ಡಾ. ಮಂಜುನಾಥ್ ಅವರೊಂದಿಗೆ ಭೇಟಿಯಾದ ಕೋಟ ಶ್ರೀನಿವಾಸ ಪೂಜಾರಿ, ಯುದ್ಧ ಪೀಡಿತ ಪ್ರದೇಶಗಳಲ್ಲಿ ಇರುವ ಭಾರತೀಯರ ಸುರಕ್ಷತೆ ಕುರಿತು ಚರ್ಚಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವರು, ಆ ಪ್ರದೇಶದ ವಿಮಾನ ನಿಲ್ದಾಣಗಳ ಮೇಲೆ ದಾಳಿಗಳು ನಡೆಯುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಯಾವುದೇ ಹಂತದಲ್ಲೂ ವಿಶ್ವದ ವಿವಿಧ ಭಾಗಗಳಲ್ಲಿ ಇರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.



