ಉಡುಪಿ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ವೃತ್ತಿ ಆಯ್ಕೆ ಕುರಿತು ಸಮಗ್ರ ಮಾರ್ಗದರ್ಶನ ನೀಡುವ ಉದ್ದೇಶದಿಂದ ನಗರದ ಎಂಜಿಎಮ್ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕರಿಯರ್ ಮೇಳವನ್ನು ಆಯೋಜಿಸಲಾಯಿತು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕಾಮತ್ ಸ್ವಾಗತಿಸಿ ಮಾತನಾಡಿ, ಹತ್ತನೇ ತರಗತಿ ಮತ್ತು ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ ಶಿಕ್ಷಣದ ಬಗ್ಗೆ ಸ್ಪಷ್ಟ ದಾರಿ ತೋರಿಸಲು ಈ ಮೇಳ ಸಹಾಯಕವಾಗಲಿದೆ ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಆಯ್ಕೆಗಳಿರುವುದರಿಂದ, ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕ ಕ್ಷೇತ್ರವನ್ನು ಆರಿಸಿಕೊಳ್ಳುವುದು ಅತ್ಯಗತ್ಯ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ವಿಜಯಕುಮಾರ್ ವಿಶೇಷ ಉಪನ್ಯಾಸ ನೀಡಿದರು. ಮೇಳದಲ್ಲಿ ಸರಕಾರದ ವಿವಿಧ ಇಲಾಖೆಗಳು, ಬ್ಯಾಂಕುಗಳು ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ತಮ್ಮ ಮಳಿಗೆಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶಿಕ್ಷಣ ಹಾಗೂ ವೃತ್ತಿ ಸಂಬಂಧಿತ ಮಾಹಿತಿಗಳನ್ನು ನೀಡಿದರು. ಒಂಬತ್ತನೇ ತರಗತಿಯಿಂದ ಪದವಿಪೂರ್ವ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು ಸಾರ್ವಜನಿಕರು ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲೋಕೇಶ್ ಸಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣ ಸ್ವಾಮಿ, ಡಯಟ್ ಸದಸ್ಯ ಮನೋಜ್ ಕಡಬ, ವಿವಿಧ ವಿದ್ಯಾಸಂಸ್ಥೆಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕ ಡಾ. ಕಿಶೋರ್ ಕುಮಾರ್ ಶೆಟ್ಟಿ ನಿರೂಪಿಸಿ ವಂದಿಸಿದರು.



