ಉಡುಪಿ : 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಕುಂದಾಪುರ ತಾಲೂಕಿನ ಶಂಕರನಾರಾಯಣದ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625ಕ್ಕೆ 625 ಅಂಕ ಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಜಿಲ್ಲೆಯ ಹೆಗ್ಗಳಿಕೆಯಾಗಿದ್ದು, ಅವರಿಗೆ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸಲಾಗಿದೆ.

ಜಿಲ್ಲೆಯ ಸಾಧನೆಗೆ ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಸಹಕಾರ ಹಾಗೂ ಶಿಕ್ಷಕರ ಮಾರ್ಗದರ್ಶನ ಪ್ರಮುಖ ಕಾರಣಗಳಾಗಿವೆ. ಜೊತೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯತತ್ಪರತೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

625ಕ್ಕೆ 624 ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ವರ್ಥ್ ಪೂಜಾರಿ, ಲಿಸಾ ಬಾರ್ಬೋಝಾ, ಮಹಾಲಕ್ಷ್ಮಿ ಭಾಗವ್, ಮಹಾಲಕ್ಷ್ಮಿ ಪೈ, ಚೈತನ್ಯಶ್ರೀ ಆರ್ ಉಡುಪಿ ಸೇರಿದಂತೆ 623 ಹಾಗೂ 622 ಅಂಕ ಪಡೆದ ಇತರೆ ವಿದ್ಯಾರ್ಥಿಗಳಿಗೂ ಅಭಿನಂದನೆ ಸಲ್ಲಿಸಲಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಒಟ್ಟು 13,373 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 13,129 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆ ಶೇ. 98.18ರಷ್ಟು ಉತ್ತಮ ಫಲಿತಾಂಶ ದಾಖಲಿಸಿದೆ.



