ಉಡುಪಿ : ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಭಾಪತಿ ಹಾಗೂ ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಯಾಗಿರುವ ಬಸ್ರೂರು ರಾಜೀವ ಶೆಟ್ಟಿ ಅವರು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರನ್ನು ಭೇಟಿ ಮಾಡಿ ರೆಡ್‌ಕ್ರಾಸ್‌ನ ವಿವಿಧ ಚಟುವಟಿಕೆಗಳ ಕುರಿತು ಚರ್ಚಿಸಿದರು.

ಈ ವೇಳೆ ರಾಜ್ಯದಲ್ಲಿನ ರೆಡ್‌ಕ್ರಾಸ್ ಸೇವಾ ಕಾರ್ಯಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ರಾಜ್ಯಪಾಲರು, ಸಂಸ್ಥೆಯ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವು ಮಹತ್ವದ ಸಲಹೆಗಳನ್ನು ನೀಡಿದರು. ಭೇಟಿಯ ಸಂದರ್ಭದಲ್ಲಿ ರಾಜ್ಯ ರೆಡ್‌ಕ್ರಾಸ್ ಆಡಳಿತ ಮಂಡಳಿಯ ಕೆಲ ಸದಸ್ಯರೂ ಉಪಸ್ಥಿತರಿದ್ದರು.

ಇದೇ ವೇಳೆ ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕದ ವಾರ್ಷಿಕ ಮಹಾಸಭೆ ಮೇ 13ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಟೌನ್‌ಹಾಲ್‌ನ ಮಿನಿಹಾಲ್‌ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜಿಲ್ಲಾಧಿಕಾರಿ ಹಾಗೂ ರೆಡ್‌ಕ್ರಾಸ್ ಅಧ್ಯಕ್ಷ ಸ್ವರೂಪ ಟಿ.ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲೆಯ ರೆಡ್‌ಕ್ರಾಸ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.



