ಉಡುಪಿ : ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ನಗರ ಪ್ರದೇಶಗಳಲ್ಲಿ 7,197 ಹಾಗೂ ಗ್ರಾಮೀಣ ಭಾಗದಲ್ಲಿ 13,185 ಸೇರಿದಂತೆ ಒಟ್ಟು 20,382 ಬೀದಿ ನಾಯಿಗಳನ್ನು ಗುರುತಿಸಲಾಗಿದೆ. ಸರ್ಕಾರಿ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳು, ಬಸ್ ಮತ್ತು ರೈಲು ನಿಲ್ದಾಣಗಳು, ಆಸ್ಪತ್ರೆಗಳು, ಕ್ರೀಡಾಂಗಣಗಳು ಸೇರಿದಂತೆ 253 ಸಂಸ್ಥೆಗಳ ವ್ಯಾಪ್ತಿಯಲ್ಲಿ 446 ಬೀದಿ ನಾಯಿಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಹಳೆಯ ಕಟ್ಟಡಗಳನ್ನು ಗುರುತಿಸಿ ಮಾಹಿತಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಪ್ರತಿ ತಾಲೂಕಿನಲ್ಲೂ ಆಶ್ರಯ ತಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಉಡುಪಿ ನಗರಸಭೆ, ಕುಂದಾಪುರ, ಕಾರ್ಕಳ ಹಾಗೂ ಕಾಪು ಪುರಸಭೆ, ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 11.91 ಎಕರೆ ಭೂಮಿ ಮಂಜೂರು ಮಾಡಲಾಗಿದ್ದು, 33.93 ಲಕ್ಷ ರೂ. ವೆಚ್ಚದ ಕ್ರಿಯಾ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.

ಪ್ರತಿ ವಾರ್ಡ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ವಿತರಣೆಗಾಗಿ ಪ್ರತ್ಯೇಕ ಸ್ಥಳಗಳನ್ನು ಗುರುತಿಸಿ ನಾಮಫಲಕ ಅಳವಡಿಸಬೇಕು. ನಿಗದಿತ ಸ್ಥಳಗಳನ್ನು ಹೊರತುಪಡಿಸಿ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಆಹಾರ ಪೂರೈಕೆ ಮಾಡಿದರೆ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದರೂ, 2026ರ ಮಾರ್ಚ್‌ನಿಂದ ಈವರೆಗೆ ಯಾವುದೇ ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆ ನೀಡದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ತಕ್ಷಣ ಸಿಬ್ಬಂದಿ ನಿಯೋಜಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ಎಆರ್‌ವಿ ಲಸಿಕೆ ನೀಡುವುದರೊಂದಿಗೆ, ಶ್ವಾನ ಪ್ರದರ್ಶನ ಹಾಗೂ ದತ್ತು ಸ್ವೀಕಾರ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರನ್ನು ನಾಯಿಗಳನ್ನು ದತ್ತು ಪಡೆಯಲು ಪ್ರೇರೇಪಿಸಬೇಕು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಎಂ.ಸಿ. ರೆಡ್ಡಪ್ಪ, ಪಶುವೈದ್ಯಕೀಯ ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.



