ಉಡುಪಿ : ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್ಎಸ್ಕೆ) ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಕ್ಷೇತ್ರದ ಶಿಕ್ಷಣ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚಿಸಿದರು.

ಕುಂದಾಪುರ ಕ್ಷೇತ್ರದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣ ಹಾಗೂ ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ಮತ್ತು ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವ ಕುರಿತು ಸಚಿವರ ಗಮನ ಸೆಳೆದರು.


ಕ್ಷೇತ್ರದ ಶೈಕ್ಷಣಿಕ ಅಗತ್ಯತೆಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದರು. ಈ ಭೇಟಿ ಮೂಲಕ ಕುಂದಾಪುರ ಭಾಗದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಲಾಗಿದೆ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.



