ಉಡುಪಿ : ಕಾರ್ಕಳ ತಾಲೂಕಿನ ಮಾಳ ಗೇಟ್ನಿಂದ ಎಸ್.ಕೆ. ಬಾರ್ಡರ್ ಮೂಲಕ ಶೃಂಗೇರಿಯ ತಣಿಕೋಡು ಗೇಟ್ವರೆಗೆ 29 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಸುಮಾರು 550 ಕೋಟಿ ವೆಚ್ಚದ ಈ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಕಾಮಗಾರಿಗೆ ಅಗತ್ಯವಿರುವ ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ ಎಂದು ಅವರು ತಿಳಿಸಿದರು. ಮಾಳ ಗೇಟ್ನಿಂದ ರಸ್ತೆ ಇಕ್ಕೆಲಗಳಲ್ಲಿ ಬರುವ ಅರಣ್ಯ ಪ್ರದೇಶ ತೆರವುಗೊಳಿಸಲು ಕಂದಾಯ ಇಲಾಖೆಯ ಮೂಲಕ ಅರಣ್ಯ ಇಲಾಖೆಗೆ ಸುಮಾರು 50 ಎಕರೆ ಭೂಮಿಯನ್ನು ವರ್ಗಾಯಿಸಬೇಕಾಗಿದೆ. ಈ ಸಂಬಂಧ ಕಡತ ವಿಲೇವಾರಿಗಾಗಿ ಶನಿವಾರ ಶಿವಮೊಗ್ಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಸಮಯ ನಿಗದಿಯಾಗಿದೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಅವರು, ಹಿಂದೆ ಗುಳಗುಂಜಿ ಮನೆ, ಕೊರ್ಕನಹಳ್ಳಿ ಸೇರಿದಂತೆ ಮೂರು ಸೇತುವೆಗಳ ಕಾಮಗಾರಿ ಅರಣ್ಯ ಇಲಾಖೆಯ ಅನುಮತಿ ಕೊರತೆಯಿಂದ ಸ್ಥಗಿತಗೊಂಡಿತ್ತು. ಇದೀಗ ಅಗತ್ಯ ಅನುಮತಿ ದೊರಕುವ ನಿರೀಕ್ಷೆಯಿದ್ದು, ರಸ್ತೆ ಇಕ್ಕೆಲಗಳಲ್ಲಿ ಗಡಿ ಗುರುತು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕಂದಾಯ ಇಲಾಖೆ ಪ್ರಸ್ತಾವಿತ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದಲ್ಲಿ, ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಾಳ–ತಣಿಕೋಡು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ ಸಿಗಲಿದೆ ಎಂಬ ವಿಶ್ವಾಸವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ವ್ಯಕ್ತಪಡಿಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ನವೀನ್ ರಾಜ್, ಅರಣ್ಯ ಇಲಾಖೆಯ ಅರುಣ್, ಸತೀಶ್ ನಾಯಕ್, ಸುಬ್ರಹ್ಮಣ್ಯ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.



