ಉಡುಪಿ : ವಂಡ್ಸೆಯಿಂದ ಕೊಲ್ಲೂರು ಕಡೆಗೆ ಸಾಗುವ ಮಾರ್ಗದಲ್ಲಿ ಚಿತ್ತೂರು ಪೆಟ್ರೋಲ್ ಬಂಕ್ ಎದುರಿನ ಪ್ರೌಢಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬದಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.

ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಇದೇ ಮಾರ್ಗದ ಮೂಲಕ ಶಾಲೆಗೆ ಸಂಚರಿಸುತ್ತಿದ್ದಾರೆ. ಇದೀಗ ಮಳೆಗಾಲ ಆರಂಭವಾಗಿದ್ದು, ಬಿರುಗಾಳಿ ಹಾಗೂ ಭಾರೀ ಮಳೆಯ ಪರಿಣಾಮವಾಗಿ ರಸ್ತೆಯ ಪಕ್ಕದಲ್ಲಿರುವ ಹಳೆಯ ಮತ್ತು ಅಪಾಯಕಾರಿ ಮರಗಳು ಯಾವ ಕ್ಷಣದಲ್ಲಾದರೂ ಉರುಳಿ ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಮಳೆಗಾಲದ ಆರಂಭಿಕ ದಿನಗಳಲ್ಲೇ ಗಾಳಿ-ಮಳೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಶಾಲಾ ಮಕ್ಕಳ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸಂಬಂಧಿತ ಅರಣ್ಯ ಇಲಾಖೆ, ಪಂಚಾಯಿತಿ ಹಾಗೂ ಇತರ ಅಧಿಕಾರಿಗಳು ಅಪಾಯಕಾರಿಯಾಗಿ ನಿಂತಿರುವ ಮರಗಳನ್ನು ಗುರುತಿಸಿ ಕೊಂಬೆಗಳನ್ನು ಕತ್ತರಿಸುವುದು ಅಥವಾ ಅಗತ್ಯವಿದ್ದರೆ ಮರಗಳನ್ನು ತೆರವುಗೊಳಿಸುವ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿದ್ದಲ್ಲಿ ವಿದ್ಯಾರ್ಥಿಗಳು ಹಾಗೂ ವಾಹನ ಸವಾರರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದ್ದು, ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.



