ಉಡುಪಿ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಮಹಿಳಾ ಸ್ನೇಹಿಯಾಗಿ ರೂಪಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮಣಿಪಾಲದಲ್ಲಿರುವ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆಯ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆದ ನಿಯೋಗವು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಎದುರಾಗುವ ಸಮಸ್ಯೆಗಳನ್ನು ಪರಿಗಣಿಸಿ, ಅರ್ಹ ಮಹಿಳಾ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಕುಂದಾಪುರದ ಮುಖಂಡೆ ಬಲ್ಕೀಸ್, ಕಾರ್ಕಳದ ಸುನೀತಾ ಶೆಟ್ಟಿ, ಬೈಂದೂರಿನ ಶೋಭಾ ಹಾಗೂ ನಾಗರತ್ನ ನಾಡ, ಉಡುಪಿಯ ನಳಿನಿ ಎಸ್. ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.



