Monday, June 29, 2026

spot_img

ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿನ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸುರಕ್ಷಿತ ಸಂಚಾರವನ್ನು ಖಚಿತಪಡಿಸುವ ಉದ್ದೇಶದಿಂದ 6 ಚಕ್ರ ಮತ್ತು ಅದಕ್ಕಿಂತ ಹೆಚ್ಚಿನ ಎಲ್ಲಾ ಸರಕು ಸಾಗಾಣಿಕೆ ವಾಹನಗಳಿಗೆ ಗಂಟೆಗೆ 60 ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ವಾಹನಗಳು ಮತ್ತು ಮರಳು ಸಾಗಾಣಿಕೆ ವಾಹನಗಳ ಅತಿಭಾರ ಹಾಗೂ ವೇಗದಿಂದ ರಸ್ತೆ ಹಾನಿ ಮತ್ತು ಅಪಘಾತಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಪೀಡ್ ಗವರ್ನರ್ ಅಳವಡಿಕೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ನಿರಂತರ ತಪಾಸಣೆ ನಡೆಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳಿಗೆ ಬಾಗಿಲು ಅಳವಡಿಕೆ ಕಡ್ಡಾಯಗೊಳಿಸುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿದ್ದರೂ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಡೋರ್ ಅಳವಡಿಸಿರುವ ಮತ್ತು ಅಳವಡಿಸದ ಬಸ್‌ಗಳ ಮಾಹಿತಿ ಹಾಗೂ ಕೈಗೊಂಡ ಕ್ರಮಗಳ ವರದಿಯನ್ನು ಎರಡು ವಾರಗಳೊಳಗೆ ಸಲ್ಲಿಸುವಂತೆ ಸೂಚಿಸಿದರು. ವಾಹನಗಳ ಫಿಟ್ನೆಸ್ ನವೀಕರಣವೂ ಡೋರ್ ಅಳವಡಿಕೆಯ ಆಧಾರದ ಮೇಲೆಯೇ ಮಾಡಬೇಕು ಎಂದರು.

ಶಾಲಾ-ಕಾಲೇಜುಗಳ ಸುತ್ತಮುತ್ತ ಸೂಚನಾ ಫಲಕ, ಹಂಪ್, ಜೀಬ್ರಾ ಕ್ರಾಸಿಂಗ್, ಬ್ಯಾರಿಕೇಡ್ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ವ್ಯವಸ್ಥೆಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಬಸ್‌ಗಳಲ್ಲಿ ಪ್ರಯಾಣಿಕರು ಕಸ ಎಸೆಯುವುದನ್ನು ತಡೆಯಲು ಕಸದ ಬುಟ್ಟಿಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಈಗಾಗಲೇ ಸೂಚನೆ ನೀಡಿದ್ದರೂ ಸಮರ್ಪಕ ಅನುಷ್ಠಾನವಾಗಿಲ್ಲ ಎಂದು ಹೇಳಿದ ಅವರು, ಈ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುರುತಿಸಲಾದ 18 ಕಪ್ಪುಚುಕ್ಕೆ (ಬ್ಲ್ಯಾಕ್ ಸ್ಪಾಟ್) ಪ್ರದೇಶಗಳಲ್ಲಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲಾಗಿದ್ದು, ಉಳಿದ ಪ್ರದೇಶಗಳಲ್ಲಿಯೂ ಶೀಘ್ರ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಪೂರ್ಣಗೊಳಿಸಬೇಕು ಎಂದರು.

ನಗರ ಪ್ರದೇಶಗಳಲ್ಲಿ ರಸ್ತೆ ಬದಿಯ ಅನಧಿಕೃತ ಗೂಡಂಗಡಿ, ತಳ್ಳುಗಾಡಿ ಹಾಗೂ ಫಾಸ್ಟ್‌ಫುಡ್ ಅಂಗಡಿಗಳನ್ನು ತೆರವುಗೊಳಿಸಿ, ಪರ್ಯಾಯವಾಗಿ ವೆಂಡಿಂಗ್ ಝೋನ್‌ಗಳನ್ನು ಗುರುತಿಸುವಂತೆ ನಗರಸಭೆಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಬಸ್ ನಿಲ್ದಾಣದ ಹೊರತಾಗಿ ಬೇರೆಡೆ ಪ್ರಯಾಣಿಕರನ್ನು ಹತ್ತಿಸುವ ಬಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಪೌರಾಯುಕ್ತ ಮಹಾಂತೇಶ ಹಂಗರಗಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles