Sunday, July 12, 2026

spot_img

ಜಿಲ್ಲಾ ಆಸ್ಪತ್ರೆ, ತಾಯಿ-ಮಕ್ಕಳ ಆಸ್ಪತ್ರೆ ಪರಿಶೀಲಿಸಿದ ಸಚಿವ ಯು.ಟಿ. ಖಾದರ್..

ಉಡುಪಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಶನಿವಾರ ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಸೇವೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಈ ವೇಳೆ ಆಸ್ಪತ್ರೆಯ ನೂತನ ಕಟ್ಟಡ, ಚಿಕಿತ್ಸೆ ವ್ಯವಸ್ಥೆ, ಶಸ್ತ್ರಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಗಳನ್ನು ಭೇಟಿ ಮಾಡಿದ ಸಚಿವರು, ಅವರ ಆರೋಗ್ಯ ವಿಚಾರಿಸಿ ವೈದ್ಯರು ಹಾಗೂ ಶುಶ್ರೂಷಕರ ಸೇವೆಯ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯ ಸೇವೆಗಳ ಬಗ್ಗೆ ರೋಗಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಚಿವರು ಸಂತಸ ವ್ಯಕ್ತಪಡಿಸಿದರು. ಬಳಿಕ ಶಸ್ತ್ರಚಿಕಿತ್ಸಾ ವಿಭಾಗ (ಒಟಿ) ಪರಿಶೀಲಿಸಿದ ಸಚಿವರು, ಲಭ್ಯವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಷ್ಟು ಅಗತ್ಯವಿರುವ ಸೌಲಭ್ಯಗಳ ಕುರಿತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಚ್. ಅಶೋಕ್ ಹಾಗೂ ಜಿಲ್ಲಾಧಿಕಾರಿ ಸ್ವರೂಪ್ ಅವರೊಂದಿಗೆ ಚರ್ಚಿಸಿದರು.

ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ದಾಖಲಾಗಿದ್ದ ತಾಯಂದಿರು ಹಾಗೂ ಮಕ್ಕಳೊಂದಿಗೆ ಸಂವಾದ ನಡೆಸಿ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ನಂತರ ಜಿಲ್ಲಾಧಿಕಾರಿ ಸ್ವರೂಪ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಚ್. ಅಶೋಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಹಾಗೂ ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಆರೋಗ್ಯ ಇಲಾಖೆ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸುಮಾರು 150ಕ್ಕೂ ಹೆಚ್ಚು ಹೆರಿಗೆಗಳು ನಡೆಯುತ್ತಿರುವ ಮಾಹಿತಿ ಪಡೆದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ತಾಲೂಕು ಆಸ್ಪತ್ರೆಗಳಲ್ಲಿಯೂ ಹೆರಿಗೆ ಸೇವೆಯನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಸಲಹೆ ನೀಡಿದರು. ಜಿಲ್ಲಾ ಆಸ್ಪತ್ರೆಗೆ ಪ್ರತಿದಿನ 700ರಿಂದ 800 ಹೊರರೋಗಿಗಳು, ಸೋಮವಾರಗಳಲ್ಲಿ 900ಕ್ಕೂ ಹೆಚ್ಚು ಮಂದಿ ಚಿಕಿತ್ಸೆಗೆ ಆಗಮಿಸುತ್ತಿರುವ ಮಾಹಿತಿ ಪಡೆದ ಸಚಿವರು, ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳ ಮೇಲೆ ಇಟ್ಟಿರುವ ವಿಶ್ವಾಸವನ್ನು ಶ್ಲಾಘಿಸಿದರು. ಆಸ್ಪತ್ರೆಯ ವೈದ್ಯರು, ತಜ್ಞರು ಹಾಗೂ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ ಸಚಿವರು, ಸೇವಾ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಶಸ್ತ್ರಚಿಕಿತ್ಸಾ ಸೇವೆಗಳನ್ನು ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾ ಆಸ್ಪತ್ರೆ, ತಾಯಿ-ಮಕ್ಕಳ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ನಡೆಯುವ ಯಶಸ್ವಿ ಚಿಕಿತ್ಸೆಗಳು ಮತ್ತು ಶಸ್ತ್ರಚಿಕಿತ್ಸೆಗಳ ಕುರಿತು ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ತಿಂಗಳಿಗೆ ಎರಡು ಬಾರಿ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ತಿಂಗಳಿಗೆ ಒಂದು ಬಾರಿ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರಿ ಆಸ್ಪತ್ರೆಗಳ ಸಾಧನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡದ ದುರಸ್ತಿ, ಆಸ್ಪತ್ರೆ ಎದುರಿನ ನೂತನ ಕಟ್ಟಡ ನಿರ್ಮಾಣಕ್ಕಾಗಿ ತೋಡಿರುವ ಗುಂಡಿ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಈ ಎಲ್ಲ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲು ಜುಲೈ 16ರಂದು ಬೆಂಗಳೂರಿನಲ್ಲಿ ಆಯುಕ್ತರು, ಸಂಬಂಧಿತ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲು ಸೂಚನೆ ನೀಡಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles