Wednesday, July 15, 2026

spot_img

ಆಗುಂಬೆ ಘಾಟಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಸುರಂಗ, ರಸ್ತೆ ಅಗಲೀಕರಣ ಕುರಿತು ಪರಿಶೀಲನೆ

ಉಡುಪಿ : ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಆಗುಂಬೆ ಸೂರ್ಯಾಸ್ತ ವೀಕ್ಷಣಾ ಸ್ಥಳದಿಂದ ಘಾಟಿಯ ಭೌಗೋಳಿಕ ಪರಿಸ್ಥಿತಿ, ರಸ್ತೆ ಸ್ಥಿತಿ ಹಾಗೂ ಸುರಕ್ಷತಾ ಅಂಶಗಳನ್ನು ಅವಲೋಕಿಸಿದ ಸಚಿವರು, ಘಾಟಿಯ ಧಾರಣಾ ಸಾಮರ್ಥ್ಯ ಮತ್ತು ಭೂಕುಸಿತದ ಸಾಧ್ಯತೆಗಳ ಕುರಿತು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳೊಂದಿಗೆ ಸಮಾಲೋಚನೆ ನಡೆಸಿದರು. ಸಚಿವರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಸಚಿವರು ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟಿಗೂ ಭೇಟಿ ನೀಡಿ ಅಲ್ಲಿನ ರಸ್ತೆ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಿಸುವ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಆಗುಂಬೆ ಘಾಟಿಯಲ್ಲಿ ಡಬಲ್ ರಸ್ತೆ ನಿರ್ಮಾಣಕ್ಕೂ ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಇಲಾಖೆಯ ಅನುಮತಿ ಸಂಬಂಧಿತ ಸಮಸ್ಯೆಗಳಿವೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಮೊದಲು ಹೆಬ್ರಿ ಹಾಗೂ ಕಾರ್ಕಳ ಭಾಗದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಳಿಕ ಬೆಂಗಳೂರಿನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಕೇಂದ್ರ ಸರ್ಕಾರ ಆಗುಂಬೆ ಟನಲ್ ಯೋಜನೆಗೆ ಟೆಂಡರ್ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಟೆಂಡರ್ ಕರೆದಿರುವುದು ನಿಜ. ಆದರೆ ಇದುವರೆಗೆ ಯಾರೂ ಅರ್ಜಿ ಸಲ್ಲಿಸಿಲ್ಲ. ಡಿಪಿಆರ್ ಸೇರಿದಂತೆ ಹಲವು ವಿಚಾರಗಳಲ್ಲಿ ಇನ್ನೂ ಸ್ಪಷ್ಟತೆ ಇಲ್ಲ. ರಸ್ತೆ ಅಗಲೀಕರಣಕ್ಕೆ ಇರುವ ಸಾಧ್ಯತೆಗಳನ್ನು ಪರಿಶೀಲಿಸಲು ನಾನು ಭೇಟಿ ನೀಡಿದ್ದೇನೆ. ಸಕಲೇಶಪುರ ಘಾಟಿಯ ಸಮಸ್ಯೆಯನ್ನು ಕಳೆದ ಮೂರು ವರ್ಷಗಳಲ್ಲಿ ಸರಿಪಡಿಸಲಾಗಿದೆ. ಚಾರ್ಮಾಡಿ ಘಾಟಿಯ ದುರಸ್ತಿ ಕಾಮಗಾರಿಗೂ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ ಕೆಲಸವಾಗಿರಬಹುದು ಅಥವಾ ಸಚಿವ ಸಂಪುಟಕ್ಕೆ ಸಂಬಂಧಿಸಿದ ವಿಚಾರವೂ ಇರಬಹುದು ಎಂದರು. ಬೆಳಗಾವಿ ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯಲ್ಲಿ ಹಿರಿಯ ಶಾಸಕರು ಇದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಯಾರಿಗೆ ನೀಡಿದರೂ ಪಕ್ಷದವರಿಗೇ ನೀಡಬೇಕು. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ರಾಜ್ಯದಲ್ಲಿ ಉಂಟಾಗುತ್ತಿರುವ ಬರ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಈ ವಿಚಾರದಲ್ಲಿ ಬಿಜೆಪಿ ಯಾಕೆ ವಿರೋಧ ಮಾಡಬೇಕು ಎಂಬುದು ಗೊತ್ತಿಲ್ಲ. ಬರ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರದ ನೆರವು ಅತ್ಯಂತ ಅಗತ್ಯ. ಆ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ನಿಭಾಯಿಸಬೇಕು. ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳನ್ನು ನಾವು ಕೈಗೊಳ್ಳುತ್ತೇವೆ. ಮಳೆ ಇದೇ ರೀತಿ ಕೊರತೆಯಾದರೆ ಮುಖ್ಯಮಂತ್ರಿ ಕಚೇರಿಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles