ಉಡುಪಿ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಿದರೆ ಮಾತ್ರ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಲಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ವತಿಯಿಂದ ಸುಮಾರು ರೂ 2.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಲಿಫ್ಟ್ನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಕೊಂಕಣ ರೈಲ್ವೆಯಲ್ಲಿ ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳು ಪಾಲುದಾರರಾಗಿದ್ದು, ಕೇರಳ ಮತ್ತು ಗೋವಾ ಸರ್ಕಾರಗಳು ತಮ್ಮ ಪಾಲಿನ ಷೇರುಗಳನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿವೆ ಎಂದರು.

ಕರ್ನಾಟಕದಲ್ಲಿ ಈ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿದ್ದು, ಈ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಅವರು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರೊಂದಿಗೂ ಮಾತುಕತೆ ನಡೆಸಿದ್ದು, ರಾಜ್ಯದ ಪಾಲಿನ ಷೇರುಗಳನ್ನು ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವ ವಿಶ್ವಾಸವಿದೆ ಎಂದು ಹೇಳಿದರು. ಕೊಂಕಣ ರೈಲ್ವೆ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳಲು ಮಹಾರಾಷ್ಟ್ರ ಸರ್ಕಾರದ ಒಪ್ಪಿಗೆಯೂ ಅಗತ್ಯವಾಗಿದ್ದು, ಆ ರಾಜ್ಯದ ಸಹಮತ ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಬೆಂಗಳೂರು–ಕಾರವಾರ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸುವುದು ತಮ್ಮ ಪ್ರಮುಖ ಬೇಡಿಕೆಯಾಗಿದ್ದು, ಈ ಸಂಬಂಧ ಪ್ರಯೋಗಿಕ ಸಮೀಕ್ಷೆ ನಡೆಯುತ್ತಿದೆ. ಶೀಘ್ರದಲ್ಲೇ ಕರಾವಳಿ ಭಾಗಕ್ಕೂ ವಂದೇ ಭಾರತ್ ಸೇವೆ ದೊರೆಯುವ ನಿರೀಕ್ಷೆಯಿದೆ ಎಂದರು.

ಬಾರ್ಕೂರು ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ರೂ14.50 ಕೋಟಿ ಮೊತ್ತದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಮುಂದಿನ ಎರಡು ತಿಂಗಳೊಳಗೆ ಅನುದಾನ ಮಂಜೂರಾದರೆ ಪ್ರಯಾಣಿಕರ ಶೆಲ್ಟರ್ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಂಸದರು ತಿಳಿಸಿದರು.ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


