ಉಡುಪಿ : ಮಟ್ಕಾ ಜುಗಾರಿ ಪ್ರಕರಣಗಳಲ್ಲಿ ಪದೇಪದೇ ಭಾಗಿಯಾಗಿದ್ದ ಆರೋಪಿಯೊಬ್ಬನಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಮಠದಬೆಟ್ಟು, ಶಿವಳ್ಳಿ ಗ್ರಾಮದ ನಿವಾಸಿ ರಾಮರಾಜ್/ ರಮೇಶ ಅರಸ್ (48) ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಜುಲೈ 18ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಆರೋಪಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಐದು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ನಾಲ್ಕು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ಮತ್ತೊಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ರಾಮರಾಜ್/ ರಮೇಶ ಅರಸ್ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


