ಉಡುಪಿ : ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಹೆಜಮಾಡಿ, ಪಡುಬಿದ್ರಿ, ಕಾಪು, ಮೂಳೂರು ಮತ್ತು ಮಟ್ಟು ಭಾಗಗಳಲ್ಲಿ ಕಡಲ್ಕೊರೆತ ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾನುವಾರ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರಾವಳಿಯ ವಿವಿಧ ಭಾಗಗಳಲ್ಲಿ ಸಮುದ್ರದ ಅಲೆಗಳ ಅಬ್ಬರದಿಂದ ತೀರ ಪ್ರದೇಶಗಳು ಕುಸಿಯುತ್ತಿದ್ದು, ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ನಿವಾಸಗಳಿಗೆ ಅಪಾಯ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಸ್ಥಿತಿಯ ಅವಲೋಕನ ನಡೆಸಿದರು. ಸ್ಥಳೀಯರಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ದಿನದಿಂದ ದಿನಕ್ಕೆ ಕಡಲ್ಕೊರೆತ ಹೆಚ್ಚುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಹಾನಿ ಸಂಭವಿಸುವ ಮುನ್ನವೇ ಶಾಶ್ವತ ಹಾಗೂ ತುರ್ತು ರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ವಿಪತ್ತು ನಿರ್ವಹಣಾ ನಿಧಿಯಿಂದ ತುರ್ತು ಕಾಮಗಾರಿಗಳಿಗೆ ಗರಿಷ್ಠ ಪ್ರಮಾಣದ ಅನುದಾನ ಮಂಜೂರು ಮಾಡಿ, ಕಡಲ್ಕೊರೆತ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಪರಿಶೀಲನೆ ವೇಳೆ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ.ಎಂ. ರಾಥೋಡ್, ಸಹಾಯಕ ಅಭಿಯಂತರ ಪ್ರಶಾಂತ್ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.


