ಉಡುಪಿ: ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಪುನೀತ್ ಅತ್ತಾವರ್ ಅವರು ಉಡುಪಿ ಜಿಲ್ಲೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ದಿಕ್ಕೂಚಿ ಭಾಷಣ ಮಾಡುವ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಬಂಧ ವಿಧಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಉಡುಪಿ ಪೊಲೀಸರು ಪುನೀತ್ ಅತ್ತಾವರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತ ಕಾಪಾಡುವ ಉದ್ದೇಶದಿಂದ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


