Friday, August 21, 2026

spot_img

ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಲೋಕೇಶ್ ಕೊಠಾರಿ ಬಂಧನ

ಉಡುಪಿ: ಕಾಪು ತಾಲೂಕಿನ ಮುದರಂಗಡಿ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.

ಆ.7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ನೇರ ಭಾಗಿಯಾಗಿದ್ದ ಆರೋಪಿಗಳಾದ ಅನ್ಮೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅಲಿಯಾಸ್ ದೀಪಕ್ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೃತ್ಯಕ್ಕೆ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ರೂಪಿಸಿ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಹಾಗೂ ಕಿಶೋರ್ ರಾಮ ಪೂಜಾರಿ ಅವರನ್ನು ಬಂಧಿಸಲಾಗಿತ್ತು.

ಪ್ರಕರಣದ ಮೊದಲ ಆರೋಪಿ ರಾಜುವನ್ನು ಬೈಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸರ್ಕಾರಿ ನೌಕರರ ಮೇಲಿನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೇಶ್ ತೇಜ ಕೊಠಾರಿ (42), ಯಡ್ತರೆ ಗ್ರಾಮದ ಬಾಳಿಹಿತ್ಲು ನಿವಾಸಿಯನ್ನು ಬಂಧಿಸಲಾಗಿದೆ. ಈತ ಹಿಂದೆ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಪ್ರಕರಣದ ಆರೋಪಿ ಕಿಶೋರ್ ರಾಮ ಪೂಜಾರಿ ಪರಿಚಯವಾಗಿದ್ದು, ಸ್ನೇಹಿತರಾಗಿದ್ದರು ಎನ್ನಲಾಗಿದೆ.

ಹತ್ಯೆ ಕೃತ್ಯದ ವೇಳೆ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ರಾಜು ಅವರಿಗೆ ಮೋಟಾರ್ ಸೈಕಲ್‌ಗಳನ್ನು ಒದಗಿಸಿ, ಇತರ ಆರೋಪಿಗಳೊಂದಿಗೆ ಸೇರಿ ಕೊಲೆ ನಡೆಸಲು ಅಪರಾಧಿಕ ಒಳಸಂಚು ರೂಪಿಸುವಲ್ಲಿ ಲೋಕೇಶ್ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಪತ್ತೆಗಾಗಿ ವಿಶೇಷ ಕರ್ತವ್ಯದಲ್ಲಿದ್ದ ಕಾರ್ಕಳ-ಪಡುಬಿದ್ರೆ ಪೊಲೀಸರು ಬೈಂದೂರು ತಾಲೂಕಿನ ಯಡ್ತರೆಯಲ್ಲಿ ಲೋಕೇಶ್‌ನನ್ನು ವಶಕ್ಕೆ ಪಡೆದು ಪ್ರಕರಣದ ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ್ದಾರೆ. ಆ.21ರಂದು ಆತನನ್ನು ಅಧಿಕೃತವಾಗಿ ಬಂಧಿಸಲಾಗಿದೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ಗಳು ಹಾಗೂ ಮೋಟಾರ್ ಸೈಕಲ್‌ನ ಎಂಜಿನ್ ಮತ್ತು ಚಾಸಿಸ್ ಸಂಖ್ಯೆಯನ್ನು ಉಜ್ಜಲು ಬಳಸಿದ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles