Friday, August 28, 2026

spot_img

ಜಗತ್ತಿಗೆ ಸಮಾನತೆಯ ಜ್ಞಾನದ ಬೆಳಕು ಚೆಲ್ಲಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ದೇಶ ಕಂಡ ಮಹಾನ್ ಸಂತರಲ್ಲಿ ಒಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡುವ ಮೂಲಕ ಹಿಂದುಳಿದ ಸಮುದಾಯಗಳು ಮುಖ್ಯವಾಹಿನಿಗೆ ಬರಲು ದಾರಿ ಮಾಡಿಕೊಟ್ಟರು. ಸಾಮಾಜಿಕ ಕಳಕಳಿಯ ಚಟುವಟಿಕೆಗಳ ಮೂಲಕ ದೇಶದೆಲ್ಲೆಡೆ ಸಂಚರಿಸಿ, ಜಗತ್ತಿಗೆ ಸಮಾನತೆಯ ಜ್ಞಾನದ ಬೆಳಕನ್ನು ಹರಿಸಿದರು ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ನಗರದ ಬನ್ನಂಜೆ ನಾರಾಯಣ ಗುರು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ, ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾರಾಯಣ ಗುರುಗಳು ದಾರ್ಶನಿಕ ಹಾಗೂ ಆಧ್ಯಾತ್ಮಿಕ ಸಾಧಕರಾಗಿ ಸಮಾಜದಲ್ಲಿ ಸಮಾನತೆ ನಿರ್ಮಾಣಕ್ಕೆ ಶ್ರಮಿಸಿದರು. ಕೆಳವರ್ಗದ ಜನರಿಗಾಗಿ ದೇವಾಲಯಗಳನ್ನು ನಿರ್ಮಿಸಿ ದೇವರ ಆರಾಧನೆಗೆ ಅವಕಾಶ ಕಲ್ಪಿಸಿದರು. ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಮೂಲಕ ಶಿಕ್ಷಣಕ್ಕೆ ಒತ್ತು ನೀಡಿದರು. ಅಸ್ಪೃಶ್ಯತೆ, ಜಾತೀಯತೆ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ನಿರಂತರವಾಗಿ ಹೋರಾಡಿದರು ಎಂದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನಾರಾಯಣ ಗುರುಗಳು ತಮ್ಮ ಕಾಲದಲ್ಲಿ ಸಮಾಜದಲ್ಲಿ ಬೇರೂರಿದ್ದ ಮೇಲು-ಕೀಳು ಭಾವನೆ ಹಾಗೂ ಅಸ್ಪೃಶ್ಯತೆಯ ವಿರುದ್ಧ ಹೋರಾಡಿ, ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು ಮತ್ತು ಸಮಪಾಲು ದೊರೆಯಬೇಕೆಂಬ ಆಶಯದೊಂದಿಗೆ ಶಾಂತಿಯ ಮಾರ್ಗದಲ್ಲಿ ಸಾಮಾಜಿಕ ಕ್ರಾಂತಿಯನ್ನು ನಡೆಸಿದರು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ ಮತ್ತು ಅವಕಾಶ ದೊರೆಯಬೇಕು ಎಂಬ ಆಶಯದೊಂದಿಗೆ ನಾರಾಯಣ ಗುರುಗಳು ಹಿಂದುಳಿದ ಸಮುದಾಯಗಳಿಗೆ ಶಕ್ತಿ ತುಂಬಿದರು. ದೀನರು, ಶೋಷಿತರು ಹಾಗೂ ಅಸ್ಪೃಶ್ಯರ ಪರವಾಗಿ ಮಿಡಿದ ಅವರು ಅನಿಷ್ಟ ಪದ್ಧತಿಗಳ ವಿರುದ್ಧ ಮೌನ ಕ್ರಾಂತಿ ನಡೆಸಿದರು ಎಂದರು.ಉಪನ್ಯಾಸಕ ಸಚೇಂದ್ರ ಅಂಬಾಗಿಲು ಉಪನ್ಯಾಸ ನೀಡಿ, ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ಸಂದೇಶದ ಮೂಲಕ ಶಿಕ್ಷಣ, ಉದ್ಯೋಗ ಮತ್ತು ಸಂಘಟನೆಗಳಿಗೆ ಆದ್ಯತೆ ನೀಡಿ ಸಮಾನತೆ, ಸಹೋದರತೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರಿದ ಮಹಾನ್ ಸಂತ ನಾರಾಯಣ ಗುರುಗಳು ಎಂದು ವಿವರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಐದು ವಲಯಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಆಯೋಜಿಸಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಶಶಿಧರ ಎಂ. ಅಮೀನ್ ವಡಭಾಂಡೇಶ್ವರ, ಬಿಲ್ಲವ ಸಮುದಾಯದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ತೇಜಸ್ ಎಂ. ಬಂಗೇರ ನಿರೂಪಿಸಿದರು. ಇಲಾಖೆಯ ಸಿಬ್ಬಂದಿ ವರ್ಷಾ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles