Saturday, September 26, 2026

spot_img

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಯಶ್ ಪಾಲ್ ಸುವರ್ಣ

ಉಡುಪಿ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆರಂಭಿಸಲಾಗಿದೆ. ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ತೆಂಕ ನಿಡಿಯೂರು ಗಣೇಶೋತ್ಸವ ಸಭಾಭವನದಲ್ಲಿ ನಡೆದ ಪ್ರಜಾಸೇವಾ ಆಂದೋಲನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದರೆ, ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಅರ್ಜಿ ಸಲ್ಲಿಸಿದ 21 ದಿನಗಳ ಒಳಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಕಡ್ಡಾಯವಾಗಿದ್ದು, ಅಧಿಕಾರಿಗಳು ಜನಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸರಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಕೊರತೆಯಿದ್ದು, ಇದರಿಂದ ಸಾರ್ವಜನಿಕ ಸೇವೆಗಳಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಲಾಗಿದೆ. ಅಗತ್ಯ ಸಿಬ್ಬಂದಿ ಇದ್ದಲ್ಲಿ ಕಚೇರಿಗಳ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುವುದರೊಂದಿಗೆ ಜನರಿಗೂ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತದೆ ಎಂದರು.

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸರಕಾರಿ ಅಧಿಕಾರಿಗಳು ಜನರ ಮನೆ ಬಾಗಿಲಿಗೆ ತೆರಳಿ ಅವರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಇದು ಕೇವಲ ಔಪಚಾರಿಕ ಕಾರ್ಯಕ್ರಮವಾಗದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪರಿಣಾಮಕಾರಿ ವೇದಿಕೆಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಜಯ, ತಹಶೀಲ್ದಾರ್ ಪಿ. ಗುರುರಾಜ್, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಹೇಮಂತ್ ಕುಮಾರ್, ಮಲ್ಪೆ ಠಾಣೆಯ ಉಪನಿರೀಕ್ಷಕ ಅನಿಲ್, ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ದಯಾನಂದ್ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles