Friday, October 2, 2026

spot_img

ಉಡುಪಿ ಜಿಲ್ಲಾ ಆಸ್ಪತ್ರೆ ಆರಂಭಕ್ಕೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ: ಗಂಟೆ–ಜಾಗಟೆ ಬಾರಿಸಿ ಸರ್ಕಾರದ ಗಮನ ಸೆಳೆದ ಕರವೇ

ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ಶೀಘ್ರವೇ ಕಾರ್ಯಾರಂಭಗೊಳಿಸುವಂತೆ ಆಗ್ರಹಿಸಿ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಅಹೋರಾತ್ರಿ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಪ್ರತಿಭಟನಾಕಾರರು ಗಂಟೆ ಹಾಗೂ ಜಾಗಟೆ ಬಾರಿಸುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದರು.

ಉಡುಪಿ ಜಿಲ್ಲಾ ಆಸ್ಪತ್ರೆ ಆರಂಭಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 30ರೊಳಗೆ ಆಸ್ಪತ್ರೆ ಕಾರ್ಯಾರಂಭಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಲವು ಬಾರಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿತ್ತು. ಆದರೆ, ಮನವಿಗಳಿಗೆ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಲಾಗಿದೆ ಎಂದು ಸಂಘಟನೆಯ ಗೌರವಾಧ್ಯಕ್ಷ ಅನ್ಸರ್ ಅಹಮದ್ ತಿಳಿಸಿದರು.

ಜಿಲ್ಲಾ ಆಸ್ಪತ್ರೆ ಕಟ್ಟಡ ಹಾಗೂ ಅಗತ್ಯ ಮೂಲಸೌಕರ್ಯಗಳಿದ್ದರೂ ಆಸ್ಪತ್ರೆಯ ಪೂರ್ಣ ಪ್ರಮಾಣದ ಕಾರ್ಯಾರಂಭ ವಿಳಂಬವಾಗುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಜಿಲ್ಲೆಯ ಜನರಿಗೆ ಸುಸಜ್ಜಿತ ಸರ್ಕಾರಿ ಆರೋಗ್ಯ ಸೇವೆ ದೊರೆಯುವಂತಾಗಲು ಜಿಲ್ಲಾ ಆಸ್ಪತ್ರೆಯನ್ನು ಯಾವುದೇ ವಿಳಂಬವಿಲ್ಲದೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಒಂದು ವಾರದೊಳಗೆ ಯಾವುದೇ ಸಕಾರಾತ್ಮಕ ಸ್ಪಂದನೆ ನೀಡದಿದ್ದರೆ ಹೋರಾಟವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಅನ್ಸರ್ ಅಹಮದ್ ಎಚ್ಚರಿಸಿದರು. ಅಗತ್ಯವಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟದ ಸ್ವರೂಪವನ್ನು ಮತ್ತಷ್ಟು ತೀವ್ರಗೊಳಿಸುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಪ್ರಸನ್ನ ಕುಮಾರ್ ಶೆಟ್ಟಿ ಅವರು ಗಂಟೆ ಬಾರಿಸುವ ಮೂಲಕ ಅಹೋರಾತ್ರಿ ಪ್ರತಿಭಟನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘಟನೆಯ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles