ಉಡುಪಿ: ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಗ್ರಾಮೀಣ ಪ್ರದೇಶಗಳನ್ನು ಕೈಬಿಟ್ಟು, ಅವುಗಳನ್ನು ಪ್ರತ್ಯೇಕ ಗ್ರಾಮ ಪಂಚಾಯಿತಿಗಳಾಗಿ ರಚಿಸಬೇಕೆಂಬ ಬೇಡಿಕೆಗೆ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಸ್ಪಂದಿಸಿದ್ದಾರೆ. ತಗ್ಗರ್ಸೆ, ಆಲಂದೂರು, ವಸ್ರೆ, ಗಂಗನಾಡು ಹಾಗೂ ಮದ್ದೋಡಿ ಗ್ರಾಮಗಳನ್ನು ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಪ್ರತ್ಯೇಕಿಸಬೇಕೆಂದು ಆಗ್ರಹಿಸಿ ಕಳೆದ 432 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಅ. 13ರಂದು ಸಚಿವ ಎಚ್.ಸಿ. ಬಾಲಕೃಷ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ನೀಡಿದರು.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಮಂಜುನಾಥ ಭಂಡಾರಿ ಅವರು ಸಲ್ಲಿಸಿದ ಮನವಿಯನ್ನು ಪರಿಗಣಿಸಿದ ಸಚಿವರು, ಐದು ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂಬಂಧ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವರು, ಪ್ರತಿಭಟನೆಯನ್ನು ಮುಕ್ತಾಯಗೊಳಿಸುವಂತೆ ತಿಳಿಸಿದರು.

ಗ್ರಾಮೀಣ ಪ್ರದೇಶಗಳ ಜನರ ಬೇಡಿಕೆಗೆ ಸ್ಪಂದಿಸಿ ಸಚಿವರು ಈ ನಿರ್ಧಾರ ಕೈಗೊಂಡಿರುವುದು ದೀರ್ಘಕಾಲದಿಂದ ನಡೆಯುತ್ತಿದ್ದ ಹೋರಾಟಕ್ಕೆ ಮಹತ್ವದ ಬೆಳವಣಿಗೆಯಾಗಿದೆ. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್, ವೀರಭದ್ರ ಗಾಣಿಗ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅರವಿಂದ್ ಪೂಜಾರಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಪ್ರತಿಭಟನಾಕಾರರು ಉಪಸ್ಥಿತರಿದ್ದರು.




