ಉಡುಪಿ ; ಅಲೆ ಇಲ್ಲದಿದ್ದರೆ ಸಮುದ್ರಕ್ಕೆ ಬೆಲೆಯಿಲ್ಲ; ಕರಾವಳಿ ಇಲ್ಲದಿದ್ದರೆ ರಾಜ್ಯಕ್ಕೂ ಬೆಲೆಯಿಲ್ಲ. ಕರಾವಳಿಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಸಾಂಸ್ಕೃತಿಕ ವೈಭವವನ್ನು ಬಳಸಿಕೊಂಡು ಈ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಐದನೇ ವರ್ಷದ ದಸರಾ ಮಹೋತ್ಸವದ ಅಂಗವಾಗಿ ಗುರುವಾರ ನಡೆದ ಸಾರ್ವಜನಿಕ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಸರಾ ಕೇವಲ ಧಾರ್ಮಿಕ ಆಚರಣೆಯಲ್ಲ ಜನರ ಬದುಕು, ವ್ಯಾಪಾರ, ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಚೈತನ್ಯ ತುಂಬುವ ಹಬ್ಬವೂ ಹೌದು. ಮೈಸೂರು ದಸರೆಯಂತೆ ಕರಾವಳಿಯ ದಸರಾ ಮಹೋತ್ಸವಗಳೂ ಪ್ರವಾಸೋದ್ಯಮದ ಬೆಳವಣಿಗೆಗೆ ನೆರವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಮಹಿಳೆಯರ ಮಹತ್ವವನ್ನು ವಿವರಿಸಿದ ಮುಖ್ಯಮಂತ್ರಿ, ಮಹಾಲಕ್ಷ್ಮೀ ಸಂಪತ್ತಿನ ಸಂಕೇತ, ಸರಸ್ವತಿ ಜ್ಞಾನದ ಪ್ರತೀಕ ಹಾಗೂ ಮಹಾಕಾಳಿ ಶಕ್ತಿಯ ಸ್ವರೂಪ ಎಂದರು. ಮಹಿಳೆಯರು ಕುಟುಂಬದ ಆಧಾರಸ್ತಂಭಗಳಾಗಿದ್ದು, ಅವರು ಸಬಲರಾದಾಗ ಕುಟುಂಬ, ಸಮಾಜ ಮತ್ತು ನಾಡು ಪ್ರಗತಿಯತ್ತ ಸಾಗುತ್ತದೆ ಎಂದು ಹೇಳಿದರು. ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ನಮ್ಮ ಸಂಸ್ಕೃತಿಯಲ್ಲಿ ತಾಯಿ, ಮಹಿಳೆ ಮತ್ತು ಮಾತೃಭಾಷೆಗೆ ವಿಶೇಷ ಸ್ಥಾನವಿದೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಸಾಮಾಜಿಕ ಸ್ಥಾನಮಾನವನ್ನು ಬಲಪಡಿಸುವುದು ಅಗತ್ಯ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು. ಜನರ ವಿಶ್ವಾಸವೇ ಸರ್ಕಾರದ ಶಕ್ತಿ. ಮರಕ್ಕೆ ಬೇರಿನಷ್ಟೇ ಮನುಷ್ಯನಿಗೆ ನಂಬಿಕೆ ಮುಖ್ಯ. ನನ್ನ ಮೇಲೆ ವಿಶ್ವಾಸವಿಡಿ ಎಂದು ಮನವಿ ಮಾಡಿದರು.

ಮೀನುಗಾರರ ಬೇಡಿಕೆಗಳ ಬಗ್ಗೆ ಚರ್ಚೆ
ಕರಾವಳಿಯ ಮೀನುಗಾರ ಸಮುದಾಯದ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ ಆಲಿಸಿದರು. ಜಿ. ಶಂಕರ್ ಅವರ ನೇತೃತ್ವದಲ್ಲಿ ಸಮುದಾಯದ ಪರವಾಗಿ ಸಾಲದ ಮೇಲಿನ ಬಡ್ಡಿರಹಿತ ಸೌಲಭ್ಯ, ಬಂದರು ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಲ್ಲಿಸಲಾಯಿತು. ಬೇಡಿಕೆಗಳಿಗೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್, ಈ ವಿಚಾರಗಳನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ ಮುಂದಿನ ಕ್ರಮಗಳ ಕುರಿತು ಚರ್ಚಿಸುವುದಾಗಿ ತಿಳಿಸಿದರು. ನಿಮ್ಮ ಬೇಡಿಕೆಗಳನ್ನು ನನ್ನ ಗಮನಕ್ಕೆ ತಂದಿದ್ದೀರಿ. ಆದರೆ ಇಲ್ಲಿಯೇ ನಿಂತು ಯಾವುದೇ ಘೋಷಣೆ ಮಾಡುವುದಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೆಂಗಳೂರಿಗೆ ಹೋದ ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದರು. ಕರಾವಳಿಯ ಸಾಂಪ್ರದಾಯಿಕ ಕಲೆ ಮತ್ತು ಕುಶಲಕರ್ಮಿಗಳ ಬದುಕಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಕಳದಲ್ಲಿ ಕೆತ್ತನೆ ಪಾರ್ಕ್ ನಿರ್ಮಿಸುವ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಚಿನ್ನಾಭರಣಗಳ ಕೆತ್ತನೆ, ಮರದ ಕೆತ್ತನೆ ಸೇರಿದಂತೆ ತಲೆಮಾರುಗಳಿಂದ ಬೆಳೆದು ಬಂದಿರುವ ಸಾಂಪ್ರದಾಯಿಕ ಕಲೆಗಳನ್ನು ಉಳಿಸಿ ಬೆಳೆಸುವುದು ಸರ್ಕಾರದ ಉದ್ದೇಶವಾಗಿದೆ. ಇಂತಹ ಕಲೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದರಿಂದ ಕುಶಲಕರ್ಮಿಗಳ ಪ್ರತಿಭೆಗೆ ಮನ್ನಣೆ ದೊರೆಯುವುದರ ಜೊತೆಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ ಎಂದರು.

ದೇವರು ವರವನ್ನೂ ಕೊಡುವುದಿಲ್ಲ, ಶಾಪವನ್ನೂ ಕೊಡುವುದಿಲ್ಲ; ಅವಕಾಶವನ್ನು ಮಾತ್ರ ನೀಡುತ್ತಾನೆ. ಆ ಅವಕಾಶವನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ ಎಂದು ಮಾರ್ಮಿಕವಾಗಿ ನುಡಿದರು.

ಕರಾವಳಿಯ ಕಡಲತೀರಗಳು, ಧಾರ್ಮಿಕ ಕ್ಷೇತ್ರಗಳು, ಯಕ್ಷಗಾನ, ಕಂಬಳ, ಹುಲಿವೇಷ ಹಾಗೂ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಮೂಲಕ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ವೈಶಿಷ್ಟ್ಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಚಿಂತನೆ ಇದೆ. ಈ ಸಂಬಂಧ ಮಂಗಳೂರಿನಲ್ಲಿ ಪ್ರವಾಸೋದ್ಯಮ ನೀತಿಯ ಕುರಿತು ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಪ್ರವಾಸಿಗರ ಸಂಖ್ಯೆ ಹೆಚ್ಚಾದರೆ ಹೋಟೆಲ್ ಉದ್ಯಮ, ಸಾರಿಗೆ, ಸ್ಥಳೀಯ ವ್ಯಾಪಾರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಉತ್ತೇಜನ ದೊರೆಯಲಿದೆ. ಇದರಿಂದ ಯುವಜನರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಉದ್ಯೋಗಕ್ಕಾಗಿ ಬೇರೆ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ಕಡಿಮೆ ಮಾಡಬಹುದು ಎಂದರು. ತುಳು ಭಾಷೆ, ಯಕ್ಷಗಾನ, ಹುಲಿವೇಷ, ಕಂಬಳದಂತಹ ಸಾಂಸ್ಕೃತಿಕ ಪರಂಪರೆಗಳು ಕರ್ನಾಟಕದ ಹೆಮ್ಮೆಯಾಗಿದ್ದು, ಅವುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಧಾನ್ಯಗಳನ್ನು ಬಳಸಿ ರಚಿಸಲಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಅವರೇ ಅನಾವರಣಗೊಳಿಸಿದರು. ಬಳಿಕ ಮೊಗವೀರ ಸಮುದಾಯದ ಒಂಬತ್ತನೇ ಕುಲಗುರು ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯ ಅವರ ಕಂಚಿನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಮಂಕಾಳ್ ವೈದ್ಯ, ಯಶ್ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಶಾಸಕರಾದ ಲಾಲಾಜಿ ಮೆಂಡನ್, ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


