ಉಡುಪಿ : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸುವ ಮೂಲಕ ಜವಾಬ್ದಾರಿಯುತವಾಗಿ ಆಚರಿಸಬೇಕು. ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆಗಳಿಗೆ ಪರವಾನಗಿ ನೀಡುವಾಗ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚಿಸಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾತ್ಕಾಲಿಕ ಪಟಾಕಿ ಮಾರಾಟಗಾರರು ಸಂಬಂಧಪಟ್ಟ ಇಲಾಖೆಗಳ ನಿರಾಕ್ಷೇಪಣಾ ಪತ್ರ ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು ಪಾಲಿಸಬೇಕು. ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪಟಾಕಿ ಮಾರಾಟಕ್ಕೆ ನಿಗದಿಪಡಿಸಿದ ತೆರೆದ ಪ್ರದೇಶಗಳಲ್ಲಿ 10X10 ಅಡಿ ವಿಸ್ತೀರ್ಣದ ಜಿಂಕ್ ಶೀಟ್ ಅಥವಾ ಅಗ್ನಿ ನಿರೋಧಕ ವಸ್ತುಗಳಿಂದ ಮಳಿಗೆಗಳನ್ನು ನಿರ್ಮಿಸಬೇಕು. ಮಳಿಗೆಗಳನ್ನು ಹರಾಜು ಮೂಲಕ ಹಂಚಿಕೆ ಮಾಡಬೇಕು. ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ಪಟಾಕಿ ಮಾರಾಟ ಮಳಿಗೆಗಳಿಗೆ ಆಗಾಗ್ಗೆ ಭೇಟಿ ನೀಡಿ, ಹಸಿರು ಪಟಾಕಿಗಳ ಮಾರಾಟ ಹಾಗೂ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು. ಅಧಿಕೃತ ಪರವಾನಗಿ ಹೊಂದಿರುವ ಮಾರಾಟಗಾರರಿಂದಲೇ ಪಟಾಕಿಗಳನ್ನು ಖರೀದಿಸಬೇಕು. ಅಕ್ರಮವಾಗಿ ಪಟಾಕಿ ಮಾರಾಟ ಮಾಡುವವರಿಂದ ಖರೀದಿಸುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿ ಮಳಿಗೆಯಲ್ಲೂ ಅಗ್ನಿಶಾಮಕ ಸಾಧನಗಳನ್ನು ಸುಸ್ಥಿತಿಯಲ್ಲಿಡಬೇಕು. ನಿಯಮಾನುಸಾರ ನೀರಿನ ವ್ಯವಸ್ಥೆ ಕಲ್ಪಿಸುವುದು ಕಡ್ಡಾಯ. ಪರವಾನಗಿ ಅವಧಿ ಮುಗಿದ ಬಳಿಕ ಮಳಿಗೆಯಲ್ಲಿ ಉಳಿದ ತ್ಯಾಜ್ಯವನ್ನು ಸುಡುಮದ್ದುಗಳಿಂದ ಪ್ರತ್ಯೇಕಿಸಿ, ಮಾರಾಟಗಾರರೇ ನಿಗದಿತ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ತಾತ್ಕಾಲಿಕ ಪಟಾಕಿ ಮಳಿಗೆಗಳಿಗೆ ಅನುಮತಿ ನೀಡುವ ಮೊದಲು ತಹಶೀಲ್ದಾರ್ ನೇತೃತ್ವದ ಸಮಿತಿ ಸ್ಥಳ ಪರಿಶೀಲನೆ ನಡೆಸಬೇಕು. ಅಂಗಡಿ-ಮುಂಗಟ್ಟುಗಳ ಸಮೀಪ, ಜನನಿಬಿಡ ಪ್ರದೇಶಗಳಲ್ಲಿ ಹಾಗೂ ಸಂಚಾರಕ್ಕೆ ಅಡಚಣೆಯಾಗುವ ಸ್ಥಳಗಳಲ್ಲಿ ಮಳಿಗೆ ತೆರೆಯಲು ಅನುಮತಿ ನೀಡಬಾರದು. ಪಟಾಕಿ ಬಳಕೆಯಿಂದ ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಹಸಿರು ಪಟಾಕಿಗಳ ಪ್ಯಾಕೆಟ್ಗಳ ಮೇಲೆ ಹಸಿರು ಪಟಾಕಿಯ ಗುರುತು ಹಾಗೂ ಕ್ಯೂಆರ್ ಕೋಡ್ ಇರುವುದನ್ನು ಪರಿಸರ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ನಿಗದಿತ ಗುರುತು ಇಲ್ಲದ ಪಟಾಕಿಗಳು ಕಂಡುಬಂದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೊಳ್ಳಿ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತಾ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.


