ಉಡುಪಿ : ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯ ಮೂಲಸೌಕರ್ಯ, ನಿವೇಶನ ಹಾಗೂ ಮಾರ್ಗದರ್ಶನ ಒದಗಿಸುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚಿಸಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕರೆ, ಕೆರೆಬೆಟ್ಟುವಿನಲ್ಲಿ 38.75 ಎಕರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ 101.19 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಪ್ರದೇಶಗಳ ಭೂಸ್ವಾಧೀನ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಿ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ನಿವೇಶನ ಹಂಚಿಕೆ ಪಡೆದ ಉದ್ಯಮಿಗಳು ಘಟಕಗಳನ್ನು ಶೀಘ್ರ ಆರಂಭಿಸಬೇಕು. ಹಿಂದಿನ ಸಭೆಯಲ್ಲಿ 17 ನಿವೇಶನಗಳಲ್ಲಿ ಉದ್ಯಮ ಆರಂಭಿಸಲು ಸೂಚಿಸಲಾಗಿತ್ತು. ಈ ಪೈಕಿ ಐದು ಘಟಕಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿದ್ದು, ಒಂಬತ್ತು ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಉಳಿದ ಮೂರು ನಿವೇಶನಗಳಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈಗಾಗಲೇ 15ಕ್ಕೂ ಹೆಚ್ಚು ಉದ್ಯಮಿಗಳು ನಿವೇಶನ ಕೋರಿ ಅರ್ಜಿ ಸಲ್ಲಿಸಿರುವುದರಿಂದ, ಬಳಕೆಯಾಗದೆ ಉಳಿದಿರುವ ನಿವೇಶನಗಳನ್ನು ನಿಯಮಾನುಸಾರ ಮರುಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಡಾ. ಸರೋಜಿನಿ ಮಹಿಷಿ ವರದಿಯನ್ವಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ 38 ಸಣ್ಣ, 47 ಮಧ್ಯಮ ಹಾಗೂ ಏಳು ಬೃಹತ್ ಕೈಗಾರಿಕೆಗಳು ಸೇರಿದಂತೆ ಒಟ್ಟು 92 ಕೈಗಾರಿಕಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಎ ವರ್ಗದಲ್ಲಿ 292, ಬಿ ವರ್ಗದಲ್ಲಿ 1,840, ಸಿ ವರ್ಗದಲ್ಲಿ 5,329 ಹಾಗೂ ಡಿ ವರ್ಗದಲ್ಲಿ 12,111 ಮಂದಿ ಸೇರಿದಂತೆ ಒಟ್ಟು 19,572 ಕನ್ನಡಿಗರು ಉದ್ಯೋಗದಲ್ಲಿದ್ದಾರೆ. ಈ ಮೂಲಕ ಶೇ. 91.42ರಷ್ಟು ಉದ್ಯೋಗಾವಕಾಶ ಸ್ಥಳೀಯರಿಗೆ ದೊರೆತಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯ ವಿವಿಧ ಕೈಗಾರಿಕಾ ಘಟಕಗಳಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಮೆಕ್ಯಾನಿಕಲ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ 484 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೈಗಾರಿಕೆಗಳಿಗೆ ಅಗತ್ಯವಿರುವ ನುರಿತ ಕಾರ್ಮಿಕರನ್ನು ಸಿದ್ಧಪಡಿಸುವ ಉದ್ದೇಶದಿಂದ ಕೈಗಾರಿಕಾ ತರಬೇತಿ ಸಂಸ್ಥೆಗಳು ಯುವಜನರಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿತ್ತು. ಆದರೆ, ಈವರೆಗೆ ಕ್ರಮ ಕೈಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಕೈಗಾರಿಕಾ ಪ್ರದೇಶಗಳಲ್ಲಿ ರಸ್ತೆ, ನೀರು, ವಿದ್ಯುತ್ ಸಂಪರ್ಕ ಹಾಗೂ ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಕೈಗಾರಿಕೆಗಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವುದರೊಂದಿಗೆ ಸ್ಥಳೀಯ ಯುವಜನರಿಗೆ ಉದ್ಯೋಗ ದೊರೆಯುವಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಉಪನಿರ್ದೇಶಕ ಜಿ. ವಾಮನ ನಾಯ್ಕ್, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ವಸಂತ ಕಿಣಿ, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಕೈಗಾರಿಕಾ ಉದ್ಯಮಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


