ಉಡುಪಿ: ವಿಧಾನ ಪರಿಷತ್ತಿನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ನಾಲ್ವರು ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಮುಂದಿನ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಎನ್‌ಡಿಎ ಗೆಲುವಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಬಳಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು. ಸುಶಿಕ್ಷಿತ ಮತದಾರರು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಚುನಾವಣೆಯ ಮೂಲಕ ಉತ್ತರ ನೀಡಿದ್ದಾರೆ ಎಂದು ಹೇಳಿದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಬ್ಯಾಲೆಟ್ ಪೇಪರ್ ಮೂಲಕ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ ಸೋಲು ಅನುಭವಿಸಿರುವುದು ಮತದಾರರ ಸ್ಪಷ್ಟ ಸಂದೇಶವಾಗಿದೆ. ಕಾಂಗ್ರೆಸ್ ಸರ್ಕಾರದ ನೀತಿಗಳ ಕುರಿತು ಜನರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ ಮತ್ತು ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.



