ಉಡುಪಿ: ಶತಾಯುಷಿ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಅಮ್ಮೆಂಬಳ ಆನಂದ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಅವರ ಸ್ವಗೃಹದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್.ಪಿ. ಅವರು, 1926ರಲ್ಲಿ ಜನಿಸಿದ ಅಮ್ಮೆಂಬಳ ಆನಂದ ಅವರು ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಿಗೆ ತಮ್ಮ ಬದುಕನ್ನೇ ಸಮರ್ಪಿಸಿಕೊಂಡ ಹಿರಿಯ ಚೇತನ. ದೇಶದ ಹೆಸರಾಂತ ನಾಯಕ ಜಾರ್ಜ್ ಫರ್ನಾಂಡಿಸ್ ಅವರ ಸಹಪಾಠಿಯಾಗಿದ್ದದ್ದು ಅವರ ಬದುಕಿನ ವಿಶೇಷ ಹೆಮ್ಮೆಯ ಸಂಗತಿ ಎಂದರು.

ಹಲವಾರು ಪತ್ರಿಕೆಗಳ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಆನಂದ ಅವರು ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿದವರು. ಅವರ ಸಾಹಿತ್ಯಿಕ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ದಿನಕರ ದೇಸಾಯಿ ಪ್ರತಿಷ್ಠಾನದ ಮುಖ್ಯಸ್ಥರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಇಂತಹ ಹಿರಿಯ ಸಾಧಕರನ್ನು ಗೌರವಿಸುವ ಅವಕಾಶ ದೊರೆತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅಮ್ಮೆಂಬಳ ಆನಂದ ಅವರು, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಕೇವಲ ಭಾಷಣಗಳಿಂದಲೂ ಅಲ್ಲ, ಪರಸ್ಪರ ದೂಷಣೆ ಮಾಡುವುದರಿಂದಲೂ ಅಲ್ಲ. ಪ್ರೀತಿ ಮತ್ತು ಸೌಹಾರ್ದದಿಂದ ಕುಳಿತು ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಸಾಹಿತ್ಯದ ಒಡನಾಟ ಹಾಗೂ ಸಂಪರ್ಕವನ್ನು ನಿರಂತರವಾಗಿ ಬೆಳೆಸಿಕೊಂಡು ಹೋಗಬೇಕು ಎಂದರು.

ಇಂದಿನ ಗೌರವ ಹಲವು ಸಮಾರಂಭಗಳಲ್ಲಿ ನಡೆಯುವ ಸನ್ಮಾನಗಳಿಗಿಂತಲೂ ಹೆಚ್ಚು ಅರ್ಥಪೂರ್ಣವಾಗಿದೆ. ಪರಸ್ಪರ ಸಾಹಿತ್ಯದ ವಿಚಾರಗಳನ್ನು ಹಂಚಿಕೊಳ್ಳುವ ಮೂಲಕ ಸಂತೋಷವನ್ನು ಅನುಭವಿಸುವ ಅವಕಾಶ ಈ ಕಾರ್ಯಕ್ರಮದಿಂದ ದೊರೆತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜನಿ ವಸಂತ್, ಜಿಲ್ಲಾ ಸಾಹಿತ್ಯ ಪರಿಷತ್ತಿನ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ರೇಡಿಯೋ ಮಣಿಪಾಲದ ಮುಖ್ಯಸ್ಥೆ ಡಾ. ರಶ್ಮಿ ಅಮ್ಮೆಂಬಳ, ದೀಪಾ ಕರ್ಕಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದು ಹಿರಿಯ ಸಾಹಿತಿಯನ್ನು ಗೌರವಿಸಿದರು.


