Thursday, November 26, 2026

spot_img

ಭಾರತ್‌ನೆಟ್ ಹಂತ-3 ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ : ಗ್ರಾಮೀಣ ಪ್ರದೇಶಗಳಲ್ಲಿ ವೇಗದ ಹಾಗೂ ನಿರಂತರ ಇಂಟರ್‌ನೆಟ್ ಸಂಪರ್ಕ ಕಲ್ಪಿಸುವ ಭಾರತ್‌ನೆಟ್ ಹಂತ-3 ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನರಿಗೆ ಗುಣಮಟ್ಟದ ಡಿಜಿಟಲ್ ಸೇವೆ ಒದಗಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಭಾರತ್‌ನೆಟ್ ಹಂತ-3 ಯೋಜನೆಯ ಅನುಷ್ಠಾನ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಕಚೇರಿಗಳು, ಸರ್ಕಾರಿ ಶಾಲೆಗಳು, ಅಂಗನವಾಡಿಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಿಗೆ ವಿಶ್ವಾಸಾರ್ಹ ಡಿಜಿಟಲ್ ಸಂಪರ್ಕ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಸರ್ಕಾರದ ವಿವಿಧ ಸೇವೆಗಳು ಗ್ರಾಮ ಮಟ್ಟದಲ್ಲಿಯೇ ಡಿಜಿಟಲ್ ರೂಪದಲ್ಲಿ ಜನರಿಗೆ ಲಭ್ಯವಾಗಲಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಭಾರತ್‌ನೆಟ್ ಮೊದಲ ಮತ್ತು ಎರಡನೇ ಹಂತಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಇಂಟರ್‌ನೆಟ್ ಸಂಪರ್ಕ ಕಲ್ಪಿಸಲಾಗಿದೆ. ಆದರೆ ಎಲ್ಲ ಗ್ರಾಮಗಳಿಗೂ ನಿರಂತರ, ವಿಶ್ವಾಸಾರ್ಹ ಹಾಗೂ ಅಡಚಣೆರಹಿತ ಸೇವೆ ಒದಗಿಸುವ ಅಗತ್ಯವಿರುವುದರಿಂದ ಸರ್ಕಾರ ಮೂರನೇ ಹಂತದ ಅಮೆಂಡೆಡ್ ಭಾರತ್‌ನೆಟ್ ಕಾರ್ಯಕ್ರಮ ಜಾರಿಗೆ ತಂದಿದೆ. ಇದರ ಮೂಲಕ ಗ್ರಾಮ ಪಂಚಾಯಿತಿಗಳ ಜತೆಗೆ ಹಳ್ಳಿಗಳಿಗೂ ಆಪ್ಟಿಕಲ್ ಫೈಬರ್ ಸಂಪರ್ಕ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಈ ಯೋಜನೆಯ ಅನುಷ್ಠಾನ ಸಂಸ್ಥೆಯಾಗಿ ಪಾಲಿಕ್ಯಾಬ್ ಇಂಡಿಯಾ ಲಿಮಿಟೆಡ್ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಬ್ಲಾಕ್ ಕೇಂದ್ರಗಳಿಂದ ಗ್ರಾಮ ಪಂಚಾಯಿತಿಗಳಿಗೆ ಕಲ್ಪಿಸಿರುವ ಲೀನಿಯರ್ ಸಂಪರ್ಕ ವ್ಯವಸ್ಥೆಯ ಬದಲಿಗೆ ಐಪಿ-ಎಂಪಿಎಲ್‌ಎಸ್ ಆಧಾರಿತ ರಿಂಗ್ ಆಪ್ಟಿಕಲ್ ಫೈಬರ್ ನೆಟ್‌ವರ್ಕ್ ವ್ಯವಸ್ಥೆ ಅಳವಡಿಸುವ ಮೂಲಕ ಸಂಪರ್ಕದ ಸುರಕ್ಷತೆ, ವಿಶ್ವಾಸಾರ್ಹತೆ ಮತ್ತು ವೇಗ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಭಾರತ್‌ನೆಟ್ ಮೂಲಕ ಮನೆಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳಿಗೆ ನೀಡಿರುವ ಸಂಪರ್ಕಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು. ಸೇವೆಯಲ್ಲಿ ವ್ಯತ್ಯಯ ಉಂಟಾದಾಗ ಸಂಬಂಧಪಟ್ಟ ಸಂಸ್ಥೆಯಿಂದ ಸೂಕ್ತ ಸ್ಪಂದನೆ ದೊರೆಯದಿದ್ದರೆ ಜನರು ಖಾಸಗಿ ಇಂಟರ್‌ನೆಟ್ ಸೇವೆಗಳತ್ತ ಮುಖ ಮಾಡುತ್ತಾರೆ. ಇಂತಹ ಪರಿಸ್ಥಿತಿ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಬಿಎಸ್‌ಎನ್‌ಎಲ್ ಇಂಟರ್‌ನೆಟ್ ಸೇವೆಗಳ ಕುರಿತು ಪ್ರತಿ ಮನೆಗೂ ಕರಪತ್ರ ಹಂಚುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು. ಜತೆಗೆ ಭಾರತ್‌ನೆಟ್ ಫ್ರಾಂಚೈಸಿಗಳಾಗಲು ಸ್ಥಳೀಯ ಯುವಕರಿಗೆ ಅವಕಾಶ ಕಲ್ಪಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿಯೂ ಜನರಿಗೆ ತಲುಪಬೇಕು. ದೇಶದ 3.5 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಗ್ರಾಮ ಪಂಚಾಯಿತಿಗಳಿಂದ ಪ್ರತಿ ಮನೆಗೂ ಸಂಪರ್ಕ ವಿಸ್ತರಿಸುವ ಜವಾಬ್ದಾರಿ ಬಿಎಸ್‌ಎನ್‌ಎಲ್ ಅಧಿಕಾರಿಗಳ ಮೇಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಬಿಎಸ್‌ಎನ್‌ಎಲ್ ಕರ್ನಾಟಕದ ಭಾರತ್‌ನೆಟ್ ವಿಭಾಗದ ಜನರಲ್ ಮ್ಯಾನೇಜರ್ ಬಿ.ಎಸ್. ನಾಗರ್, ಮಂಗಳೂರು ಜನರಲ್ ಮ್ಯಾನೇಜರ್ ಹೇಮಂತ್, ಎ.ಜೆ.ಎಂ. ರಾಜಶೇಖರ್, ಬಿಎಸ್‌ಎನ್‌ಎಲ್ ಅಧಿಕಾರಿಗಳು, ಫ್ರಾಂಚೈಸಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles