ಉಡುಪಿ : ನಾಗರಿಕರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಸದೃಢ ಕಾನೂನು-ಸುವ್ಯವಸ್ಥೆ ಅಗತ್ಯ. ಸೌಹಾರ್ದಯುತ ಹಾಗೂ ಅಪರಾಧರಹಿತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪೊಲೀಸರು ಮಹತ್ವದ ಪಾತ್ರ ವಹಿಸುತ್ತಾರೆ. ಒತ್ತಡಪೂರ್ಣ ಕರ್ತವ್ಯದ ನಡುವೆಯೂ ಮಾನಸಿಕ ನೆಮ್ಮದಿ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಅವರು ಗುರುವಾರ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ 2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದ ಅಭಿವೃದ್ಧಿಗೆ ಅಪರಾಧಮುಕ್ತ ವಾತಾವರಣ ನಿರ್ಮಾಣವಾಗಬೇಕು. ನ್ಯಾಯ, ಶಾಂತಿ ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ. ಇತರ ಇಲಾಖೆಗಳೂ ಪೊಲೀಸರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸುತ್ತವೆ. ದಿನವಿಡೀ ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸುವ ಪೊಲೀಸರು ಹೆಚ್ಚಿನ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಇಂತಹ ಒತ್ತಡದಿಂದ ಹೊರಬರಲು ಹಾಗೂ ಕುಟುಂಬದೊಂದಿಗೆ ಸಮಯ ಕಳೆಯಲು ಕ್ರೀಡಾಕೂಟಗಳು ಅವಕಾಶ ಕಲ್ಪಿಸುತ್ತವೆ. ಕ್ರೀಡಾಪಟುಗಳು ಆರೋಗ್ಯಕರ ಸ್ಪರ್ಧಾ ಮನೋಭಾವ ಮತ್ತು ಸಹೋದರತ್ವದೊಂದಿಗೆ ಉತ್ಸಾಹದಿಂದ ಭಾಗವಹಿಸಬೇಕು ಎಂದು ಹೇಳಿದರು.

ಸಾಮಾನ್ಯ ನಾಗರಿಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವ ಹಾಗೂ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪೊಲೀಸ್ ಇಲಾಖೆ ತನ್ನ ಸೇವಾ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅಪರಾಧ ನಿಯಂತ್ರಣ ಹಾಗೂ ಪತ್ತೆ ಕಾರ್ಯಕ್ಕೆ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಸ್ಥಾಪಿಸಿ ಇಡೀ ಜಿಲ್ಲೆಯಲ್ಲಿ ಕಣ್ಗಾವಲು ವ್ಯವಸ್ಥೆ ಅಳವಡಿಸಲು ಮುಂದಾಗಿದೆ. ಅಪರಾಧ ಪ್ರಕರಣಗಳು ಕಡಿಮೆಯಾದಂತೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆತು ಜಿಲ್ಲೆ ಪ್ರಗತಿಯತ್ತ ಸಾಗಲು ಸಾಧ್ಯವಾಗುತ್ತದೆ ಎಂದರು.

ಎಪಿಸಿ ಜೀವನ್ ನಾಯ್ಕ ಕ್ರೀಡಾಜ್ಯೋತಿಯೊಂದಿಗೆ ವೇದಿಕೆಗೆ ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಆರ್‌ಎಸ್‌ಐ ಚಂದ್ರ ಎಂ. ಕ್ರೀಡಾಪಟುಗಳಿಗೆ ಪ್ರಮಾಣವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ 100 ಮತ್ತು 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಸಾಧನೆ ಮಾಡಿರುವ, ಎಸ್‌ಜಿಎಫ್‌ಐ ರಾಜ್ಯ ದಾಖಲೆ ಹೊಂದಿರುವ ರಾಷ್ಟ್ರಮಟ್ಟದ ಕ್ರೀಡಾಪಟು ಹಾಗೂ ಜಿಲ್ಲಾ ಮಟ್ಟದ ಅರ್ಜುನ ಪ್ರಶಸ್ತಿ ವಿಜೇತೆ ಸ್ತುತಿ ಪಿ. ಶೆಟ್ಟಿ ಅವರನ್ನು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿದರು. ಎಪಿಸಿ ಯೋಗೀಶ್ ನಾಯ್ಕ ನಿರೂಪಿಸಿದರು.


