ಉಡುಪಿ : ಸಂಘರ್ಷಗಳಿಂದ ಸಾಧನೆಯ ಶಿಖರ ಏರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.

ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶಕ್ಕೆ ವಿಸ್ತೃತ ಸಂವಿಧಾನ ನೀಡಿದ ಮಹಾನ್ ಚೇತನರಾದ ಅಂಬೇಡ್ಕರ್ ಅವರ ಜೀವನವೇ ನಮಗೆ ದಾರಿದೀಪ. ಸಮಾನತೆಯ ಹೋರಾಟದ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಆಶಯಗಳನ್ನು ಮುಂದುವರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಅಂಬೇಡ್ಕರ್ ಅವರು ದೇಶದ ಏಳಿಗೆಗಾಗಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರೊಂದಿಗೆ ಸಮಾನವಾಗಿ ದುಡಿದ ಮಹಾನ್ ವ್ಯಕ್ತಿ. ಅವರು ರೂಪಿಸಿದ ಸಂವಿಧಾನ ಮತ್ತು ಕಾನೂನುಗಳು ಇಂದಿಗೂ ದೇಶಕ್ಕೆ ಬಲ ತುಂಬುತ್ತಿವೆ ಎಂದು ಹೇಳಿದರು.

ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಉಪನ್ಯಾಸ ನೀಡಿದರು.ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬುದ್ಧ ವಂದನೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಸಾಂಪ್ರದಾಯಿಕ ಚರ್ಮ ಕುಶಲಕರ್ಮಿ ಪಾಂಚಾಲಿ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣ ಸ್ವಾಮಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿ, ಬಸವರಾಜ ವಂದಿಸಿದರು.



