ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕಂತೆ ಬದುಕಿ ತೋರಿಸಿದವರು. ಅವರ ನಾಯಕತ್ವ ಮತ್ತು ಧೈರ್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿರಾ ಗಾಂಧಿಯವರು ಕೇವಲ ಮಹಿಳೆಯರಿಗಷ್ಟೇ ಅಲ್ಲ, ಪುರುಷರಿಗೂ ಆದರ್ಶಪ್ರಾಯ ನಾಯಕಿ. ಅವರ ನೇತೃತ್ವದಲ್ಲಿ ಭಾರತವು ಅಂತರಾಷ್ಟ್ರೀಯ ಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿತು. ದೇಶದ ಸ್ವಾವಲಂಬನೆಗಾಗಿ ಅವರು ಬ್ಯಾಂಕ್ಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿ ಸೇರಿದಂತೆ ಹಲವು ಆರ್ಥಿಕ ಹಾಗೂ ಸಾಮಾಜಿಕ ಸುಧಾರಣೆಗಳನ್ನು ಜಾರಿಗೆ ತಂದರು ಎಂದು ಅವರು ನೆನಪಿಸಿದರು. ಒಂದು ಹೊತ್ತು ಊಟಕ್ಕೂ ಕಷ್ಟ ಪಡುತ್ತಿದ್ದ ಭಾರತವನ್ನು ಇಂದಿರಾ ಗಾಂಧಿಯವರು ಮುನ್ನಡೆಸಿ ವಿಶ್ವದ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರವನ್ನಾಗಿ ರೂಪಿಸಿದರು. ಅವರ ಆಡಳಿತ ನಮಗೆ ಸದಾ ಸ್ಫೂರ್ತಿ ಎಂದು ಹೆಬ್ಬಾಳಕರ್ ಹೇಳಿದರು.

ಅವರು ಮುಂದುವರೆದು, ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಕರ್ತವ್ಯ. ದೇಶ ಉಳಿಯಬೇಕೆಂದರೆ ಕಾಂಗ್ರೆಸ್ ಪಕ್ಷ ಉಳಿಯಬೇಕು. ಉಡುಪಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಸೋತರೂ ಪಕ್ಷದ ನೆಲೆ ಬಲವಾಗಿದೆ ಎಂದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಬಗ್ಗೆ ಮಾತನಾಡುತ್ತಾ, ಹರಿದುಹಂಚಿ ಹೋಗಿದ್ದ ಭಾರತವನ್ನು ಒಂದಾಗಿ ಮಾಡಿದ್ದು ಪಟೇಲ್ರೇ. ಅಖಂಡ ಭಾರತದ ನಿರ್ಮಾಣದಲ್ಲಿ ಅವರ ಪಾತ್ರ ಅಪ್ರತಿಮ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


