ಉಡುಪಿ : ಉಡುಪಿ ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಿಢೀರ್ ದಾಳಿ ನಡೆಸಿ ವಿವಿಧ ವಿಭಾಗಗಳ ಕಡತಗಳು ಹಾಗೂ ಆಡಳಿತಾತ್ಮಕ ದಾಖಲೆಗಳ ಪರಿಶೀಲನೆ ಕೈಗೊಂಡಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಹಾಲಮೂರ್ತಿ ರಾವ್ (ಉಡುಪಿ) ಹಾಗೂ ಡಿವೈಎಸ್ಪಿ ಸುರೇಶ್ ಕುಮಾರ್ (ಮಂಗಳೂರು) ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಾಜೇಂದ್ರ ನಾಯ್ಕ್, ಚಂದ್ರಶೇಖರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ತಂಡ ನಗರಸಭೆಯ ವಿವಿಧ ಶಾಖೆಗಳಿಗೆ ಭೇಟಿ ನೀಡಿ, ಬಾಕಿ ಉಳಿದಿರುವ ಅರ್ಜಿಗಳು, ಕಡತಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಆಡಳಿತಾತ್ಮಕ ಕಾರ್ಯವೈಖರಿಯನ್ನು ಪರಿಶೀಲಿಸಿತು. ನಗರಸಭೆಯಲ್ಲಿ ಸಾರ್ವಜನಿಕರಿಂದ ಸಲ್ಲಿಸಲಾದ ಕೆಲವು ಅರ್ಜಿಗಳು ದೀರ್ಘಕಾಲದಿಂದ ವಿಲೇವಾರಿಯಾಗದೆ ಬಾಕಿ ಉಳಿದಿವೆ ಎಂಬ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಹಾಲಮೂರ್ತಿ ರಾವ್ (ಉಡುಪಿ) ಹಾಗೂ ಡಿವೈಎಸ್ಪಿ ಸುರೇಶ್ ಕುಮಾರ್ (ಮಂಗಳೂರು) ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಾಜೇಂದ್ರ ನಾಯ್ಕ್, ಚಂದ್ರಶೇಖರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ದಾಳಿಯ ವೇಳೆ ವಿವಿಧ ವಿಭಾಗಗಳ ಕಡತ ನಿರ್ವಹಣೆ, ಸಾರ್ವಜನಿಕ ಸೇವೆಗಳ ಅನುಷ್ಠಾನ, ಅರ್ಜಿಗಳ ವಿಲೇವಾರಿ ಸ್ಥಿತಿ ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದರು. ದಾಖಲೆಗಳ ಪರಿಶೀಲನೆ ಇನ್ನೂ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

ಲೋಕಾಯುಕ್ತ ದಾಳಿಯಿಂದ ನಗರಸಭೆ ಕಚೇರಿಯಲ್ಲಿ ಕೆಲಕಾಲ ಚಟುವಟಿಕೆ ಹೆಚ್ಚಾಗಿದ್ದು, ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಪರಿಶೀಲನೆಗಾಗಿ ಲೋಕಾಯುಕ್ತ ತಂಡಕ್ಕೆ ಒದಗಿಸಿದರು. ಪರಿಶೀಲನೆಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.



