ಉಡುಪಿ : ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಸತತ ಮೂರು ಬಾರಿ ಹುಸಿ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಧೀಶರು, ವಕೀಲರು, ನ್ಯಾಯಾಲಯ ಸಿಬ್ಬಂದಿ ಹಾಗೂ ಕಕ್ಷಿದಾರರ ಸುರಕ್ಷತೆಯ ದೃಷ್ಟಿಯಿಂದ ಉಡುಪಿ ವಕೀಲರ ಸಂಘದ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಭೇಟಿ ನೀಡಿ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರ ಪರವಾಗಿ ಪೊಲೀಸ್ ಉಪ ಅಧೀಕ್ಷಕರಿಗೆ ಸಲ್ಲಿಸಿದ ಮನವಿಯಲ್ಲಿ, ನ್ಯಾಯಾಲಯ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಬಾಂಬ್ ಬೆದರಿಕೆ ಪ್ರಕರಣಗಳ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶೀಘ್ರ ಪತ್ತೆಹಚ್ಚುವುದು ಹಾಗೂ ನ್ಯಾಯಾಲಯಕ್ಕೆ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಒತ್ತಾಯಿಸಲಾಯಿತು.ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಪೊಲೀಸ್ ಉಪ ಅಧೀಕ್ಷಕರು, ಪ್ರಕರಣದ ಕುರಿತು ತ್ವರಿತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಾಗೂ ನ್ಯಾಯಾಲಯದ ಭದ್ರತೆಗೆ ಸೂಕ್ತ ಕ್ರಮಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ಹಾಗೂ ವಕೀಲರಾದ ವೈ.ಟಿ. ರಾಘವೇಂದ್ರ, ಅಖಿಲ ಬಿ. ಹೆಗ್ಡೆ, ಗುರುರಾಜ್ ಜಿ.ಎಸ್., ಅನಿಲ್ ಪೂಜಾರಿ, ಕವಿತಾ, ನಾಗರಾಜ್ ಕೆ., ಬಾನುಮತಿ ನಾಯರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.


