Friday, October 23, 2026

spot_img

ಉಡುಪಿಯಲ್ಲಿ ಮಧ್ವಾಚಾರ್ಯರ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಉಡುಪಿ: ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಧಾರ್ಮಿಕ ಬೆಳವಣಿಗೆಗೆ ಶ್ರಮಿಸಿದ ದಾರ್ಶನಿಕರ ಆದರ್ಶಗಳನ್ನು ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಜೀವನತತ್ವಗಳನ್ನು ಜನರು ಅರ್ಥೈಸಿಕೊಂಡು ಪಾಲಿಸಿದಾಗ ಜಯಂತಿ ಆಚರಣೆಗಳು ಸಾರ್ಥಕವಾಗುತ್ತವೆ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜಗದ್ಗುರು ಶ್ರೀ ಮಧ್ವಾಚಾರ್ಯರ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಸುಧಾರಣೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಮಹನೀಯರು, ದಾರ್ಶನಿಕರು ಹಾಗೂ ವೀರ ಮಹಿಳೆಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರನ್ನು ಸ್ಮರಿಸುವುದರ ಜತೆಗೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ದ್ವೈತ ಸಿದ್ಧಾಂತದ ಪ್ರತಿಪಾದಕರಾದ ಮಧ್ವಾಚಾರ್ಯರ ತತ್ವಗಳು ಇಂದಿಗೂ ಅನುಕರಣೀಯವಾಗಿವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ರಾಣಿ ಚೆನ್ನಮ್ಮನ ಧೈರ್ಯ ಇಂದಿನ ಮಹಿಳೆಯರಿಗೂ ಮಾದರಿಯಾಗಿದೆ ಎಂದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಉಡುಪಿಗೆ ಕೃಷ್ಣನಗರಿ ಎಂಬ ಹಿರಿಮೆ ದೊರೆಯುವಲ್ಲಿ ಮಧ್ವಾಚಾರ್ಯರ ಕೊಡುಗೆ ಮಹತ್ವದ್ದಾಗಿದೆ. ಶ್ರೀಕೃಷ್ಣನ ಪೂಜೆ ಹಾಗೂ ದ್ವೈತ ತತ್ವದ ಪ್ರಚಾರಕ್ಕಾಗಿ ಅವರು ಎಂಟು ಮಂದಿ ಸನ್ಯಾಸಿ ಶಿಷ್ಯರನ್ನು ನೇಮಿಸಿ ಅಷ್ಟಮಠಗಳನ್ನು ಸ್ಥಾಪಿಸಿದರು ಎಂದು ತಿಳಿಸಿದರು.

ಉಡುಪಿಯ ಶ್ರೀ ವಾದಿರಾಜ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಬಿ. ಗೋಪಾಲ್ ಆಚಾರ್ ಮಧ್ವಾಚಾರ್ಯರ ಕುರಿತು ಉಪನ್ಯಾಸ ನೀಡಿ, ಭಾರತೀಯ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗೆ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ತತ್ವಗಳು ಸಾರ್ವಕಾಲಿಕ ಮೌಲ್ಯ ಹೊಂದಿವೆ. ಪ್ರತಿಯೊಬ್ಬರೂ ಸಮಾಜಕ್ಕೆ ತಮ್ಮ ಕೊಡುಗೆ ಏನು ಎಂಬುದನ್ನು ಅರಿತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಉಪನ್ಯಾಸ ನೀಡಿ, ಬಾಲ್ಯದಲ್ಲೇ ಬಿಲ್ಲುಗಾರಿಕೆ, ಕತ್ತಿವರಸೆ ಹಾಗೂ ಕುದುರೆಸವಾರಿಯಲ್ಲಿ ಪರಿಣತಿ ಪಡೆದಿದ್ದ ಚೆನ್ನಮ್ಮ, ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದವರು. ಅವರ ಸ್ವಾಭಿಮಾನ ಮತ್ತು ಹೋರಾಟದ ಮನೋಭಾವ ಇಂದಿಗೂ ಕನ್ನಡಿಗರಿಗೆ ಪ್ರೇರಣೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಅಧ್ಯಕ್ಷ ಜಯರಾಮ ಆಚಾರ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ನಿರಂಜನ ಚೋಳಯ್ಯ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕ ರಾಮಾಂಜಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles