ಉಡುಪಿ : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 22 ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಸುಗಮವಾಗಿ ಹಾಗೂ ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಪೂರಕ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಹಂತವಾಗಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಪಾವಿತ್ರ್ಯತೆ ಕಾಪಾಡಬೇಕು. ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದೂ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಈ ಬಾರಿ ಒಟ್ಟು 14,151 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 13,516 ಹೊಸ ಅಭ್ಯರ್ಥಿಗಳು, 295 ರೆಗ್ಯೂಲರ್ ಪುನರಾವರ್ತಿತ ಅಭ್ಯರ್ಥಿಗಳು, 293 ಖಾಸಗಿ ಅಭ್ಯರ್ಥಿಗಳು ಹಾಗೂ 47 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದ್ದಾರೆ. ಒಟ್ಟಾರೆ ಅಭ್ಯರ್ಥಿಗಳಲ್ಲಿ 7,353 ಗಂಡು ಮಕ್ಕಳು ಹಾಗೂ 6,798 ವಿದ್ಯಾರ್ಥಿನಿಯರು ಇದ್ದಾರೆ. ಪರೀಕ್ಷೆಗಳು ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಉಡುಪಿ ವಲಯದಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ನಡೆಸಲು ಒಟ್ಟು 686 ಕೊಠಡಿಗಳನ್ನು ನಿಗದಿಪಡಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳು ಹಾಗೂ ಅವುಗಳ ಕ್ಯಾಂಪಸ್ನಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಮಂಗಳೂರು ಸಿ.ಟಿ.ಇ ಪ್ರಾಂಶುಪಾಲೆ ಹಾಗೂ ಸಹ ನಿರ್ದೇಶಕಿ ಪುಷ್ಪಲತಾ, ಸಹಾಯಕ ಆಯುಕ್ತೆ ರಶ್ಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ್ ಹುಬ್ಬಳ್ಳಿ, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.



