ಉಡುಪಿ: ಬಡಾನಿಡಿಯೂರು ಗ್ರಾಮದ ನಿವೇಶನದ ಏಕ ವಿನ್ಯಾಸ ಕಡತ ಸಂಬಂಧವಾಗಿ ಮಾಜಿ ಶಾಸಕ ರಘುಪತಿ ಭಟ್ ಅವರು ತನ್ನ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಯಶ್ ಪಾಲ್ ಸುವರ್ಣ, ಅಧಿಕಾರಿಗಳ ಮೇಲೆ ಅನಗತ್ಯ ಒತ್ತಡ ಹೇರುವ ಉದ್ದೇಶದಿಂದ ಪ್ರತಿಭಟನೆಯ ಬೆದರಿಕೆ ಹಾಕಲಾಗುತ್ತಿದೆ. ಇದರಿಂದ ಅಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.



ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ಸಂಬಂಧಿತ ಏಕ ವಿನ್ಯಾಸ ಕಡತವನ್ನು ಕಾನೂನು ಪ್ರಕಾರ ಪರಿಶೀಲಿಸಿ ವಿಲೇವಾರಿ ಮಾಡಲು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತಕ್ಷಣ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.



