Wednesday, March 4, 2026

spot_img

ಕಚ್ಚಾತೈಲ ಸಂಗ್ರಹಣಾ ಘಟಕ ಕಾಮಗಾರಿಗೆ ಮುನ್ನೆಚ್ಚರಿಕೆ ಅಗತ್ಯ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಕೈಗೊಳ್ಳಲಾಗುತ್ತಿರುವ ಎರಡನೇ ಹಂತದ ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ವೇಳೆ ಸ್ಥಳೀಯ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನ ಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿನ ಕಚ್ಚಾತೈಲ ಸಂಗ್ರಹಣಾ ಘಟಕದ ಎರಡನೇ ಹಂತದ ಕಾಮಗಾರಿಗೆ ಸಂಬಂಧಿಸಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಘಟಕದ ಅಭಿವೃದ್ಧಿಗಾಗಿ ಸಾರ್ವಜನಿಕರಿಂದ ಭೂಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಕೆಲ ಭೂಮಾಲೀಕರಿಗೆ ಇನ್ನೂ ಪರಿಹಾರದ ಹಣ ದೊರಕಿಲ್ಲ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಭೂಮಾಲೀಕರಿಗೆ ಪರಿಹಾರವನ್ನು ಶೀಘ್ರವಾಗಿ ವಿತರಿಸುವಂತೆ ಕೆಐಎಡಿಬಿ ಅಧಿಕಾರಿಗಳಿಗೆ ಸೂಚಿಸಿದರು.

 ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಬಂಡೆ ಸ್ಫೋಟದಿಂದಾಗಿ ಸ್ಥಳೀಯ ಬಾವಿಗಳ ನೀರಿನ ಗುಣಮಟ್ಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರುಗಳು, ಮೊದಲ ಹಂತದ ಕಾಮಗಾರಿಯ ವೇಳೆ ಎದುರಾದ ಸಮಸ್ಯೆಗಳು ಮರುಕಳಿಸದಂತೆ ಈ ಬಾರಿ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳ ಗಮನ ಸೆಳೆದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಕೆಐಎಡಿಬಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles