Wednesday, October 28, 2026

spot_img

ಬ್ರಹ್ಮಾವರದಲ್ಲಿ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ರೌಡಿಶೀಟರ್ ಸುಜಿತ್ ಪಿಂಟೊ ಹತ್ಯೆ

ಉಡುಪಿ: ಬ್ರಹ್ಮಾವರದ ಭದ್ರಗಿರಿ ಜಂಕ್ಷನ್‌ನಲ್ಲಿ ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಮಂಗಳವಾರ ರಾತ್ರಿ ಸುಮಾರು 8.30ರ ವೇಳೆಗೆ ಸುಜಿತ್ ಪಿಂಟೊ ತನ್ನ ಪತ್ನಿಯ ಮನೆಗೆ ತೆರಳುತ್ತಿದ್ದಾಗ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸುಜಿತ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಜಿತ್ ಪಿಂಟೊ ಮತ್ತು ರಿಕ್ಷಾ ಚಾಲಕ ಪ್ರಮೋದ್ ಪೂಜಾರಿ ನಡುವೆ ಹಣಕಾಸಿನ ವಿಚಾರದಲ್ಲಿ ಬಾಕಿ ಪಾವತಿಗೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಮದ್ಯದ ಅಮಲಿನಲ್ಲಿ ಇಬ್ಬರ ನಡುವೆ ವಾಗ್ವಾದ ಮತ್ತು ಹೊಡೆದಾಟ ನಡೆದಿದ್ದು, ಸಿಟ್ಟಿಗೆದ್ದ ಪ್ರಮೋದ್ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ಪೂಜಾರಿ ಹಾಗೂ ಪ್ರವೀಣ್ ಎಂಬ ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಜಿತ್ ಪಿಂಟೊ ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎನ್ನಲಾಗಿದೆ. 2018ರಲ್ಲಿ ನಡೆದ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ ಹಾಗೂ 2020ರ ಯೋಗೀಶ್ ಪೂಜಾರಿ ಕೊಲೆ ಪ್ರಕರಣದಲ್ಲಿಯೂ ಆತನ ಹೆಸರು ಕೇಳಿಬಂದಿತ್ತು.  ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles