ಉಡುಪಿ : ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಟ್ಟು ಗ್ರಾಮದ ನಿರ್ಜನ ನದಿ ತೀರದಲ್ಲಿ ಹಸುವಿನ ರುಂಡ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು, ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿರ್ವ ವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ ಸುತ್ತಮುತ್ತಲಿನ ಹಲವು ದೇವಾಲಯಗಳ ಪುಣ್ಯಸ್ನಾನ ಹಾಗೂ ಜಳಕ ಕಾರ್ಯಕ್ರಮಗಳು ನಡೆಯುವ ಪ್ರದೇಶದಲ್ಲಿ ಈ ರೀತಿ ಹಸುವಿನ ಅವಶೇಷ ಪತ್ತೆಯಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.


ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಹಸುವಿನ ತ್ಯಾಜ್ಯವನ್ನು ಈ ಪ್ರದೇಶಕ್ಕೆ ತಂದು ಎಸೆದಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ತಪ್ಪಿತಸ್ಥರನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಮಾಹಿತಿ ಪಡೆದ ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಮಹಜರು ಪ್ರಕ್ರಿಯೆ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.



