ಉಡುಪಿ: ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಹಮ್ಮದ್ ರಿಯಾಜ್ (26), ಮಹಮ್ಮದ್ ಅಫ್ರಾಜ್ (23) ಹಾಗೂ ಆಶಿಲ್ (21) ಎಂದು ಗುರುತಿಸಲಾಗಿದೆ.

ಜಿಲ್ಲೆಯ ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಫಿಲ್ಲಿಂಗ್ ಸ್ಟೇಷನ್‌ನಲ್ಲಿ ಜೂನ್ 27ರಂದು ರಾತ್ರಿ ಈ ಘಟನೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ಮೂವರು ಆರೋಪಿಗಳು ರೂ 4,711.09 ಮೌಲ್ಯದ ಡೀಸೆಲ್ ತುಂಬಿಸಿಕೊಂಡು, ಬಳಿಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಪಾವತಿಸುತ್ತೇವೆ ಎಂದು ಸಿಬ್ಬಂದಿಗೆ ನಂಬಿಕೆ ಮೂಡಿಸಿದ್ದರು. ಆದರೆ ಯಾವುದೇ ಹಣ ಪಾವತಿಸದೆ ಕಾರಿನಲ್ಲೇ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ತಾಂತ್ರಿಕ ಮಾಹಿತಿ ಹಾಗೂ ಇತರ ಸುಳಿವುಗಳ ಆಧಾರದಲ್ಲಿ ಆರೋಪಿಗಳನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಝಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಶಿರ್ವ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ ಮರಬದ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಇದೇ ರೀತಿಯ ವಂಚನೆ ಪ್ರಕರಣಗಳಲ್ಲಿ ಇವರ ಪಾತ್ರವಿದೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


