ಉಡುಪಿ : ಆರೋಗ್ಯವಂತ ರಾಷ್ಟ್ರದ ಉದಯ ಆರೋಗ್ಯವಂತ ಮಹಿಳೆಯರಿಂದ ಆರಂಭವಾಗುತ್ತದೆ. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಹೆಚ್.ಪಿ.ವಿ ಲಸಿಕೆ ಸಹಕಾರಿಯಾಗಿದ್ದು, ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಈ ಲಸಿಕಾ ಅಭಿಯಾನ ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಶುಕ್ರವಾರ ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಗರ್ಭಕಂಠ ಸೇರಿದಂತೆ ಅನೇಕ ವಿಧದ ಕ್ಯಾನ್ಸರ್‌ಗಳಿಗೆ ಕಾರಣವಾಗುತ್ತದೆ. ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಲ್ಲಿ ಹೆಚ್.ಪಿ.ವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನೊಳಗಿನ ಹೆಣ್ಣು ಮಕ್ಕಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದರು.

ಲಸಿಕಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿಗೆ ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದೆ. ದೇಶದಾದ್ಯಂತ 14 ರಿಂದ 15 ವರ್ಷ ವಯಸ್ಸಿನ 1 ಕೋಟಿ 15 ಲಕ್ಷ ವಿದ್ಯಾರ್ಥಿನಿಯರಿಗೆ ಹೆಚ್.ಪಿ.ವಿ ಲಸಿಕೆ ನೀಡಲು ಯೋಜಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 6,89,620 ಅರ್ಹ ವಿದ್ಯಾರ್ಥಿನಿಯರನ್ನು ಗುರುತಿಸಲಾಗಿದ್ದು, ಈಗಾಗಲೇ 2,54,000 ಲಸಿಕೆಗಳನ್ನು ವಿವಿಧ ಜಿಲ್ಲಾ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ಮಾತನಾಡಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್., ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಸಿಸ್ಟರ್ ಪ್ರಿಯಾ ಮರಿಯಾ, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸಂಸ್ಥೆಯ ಅಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಕಾರ್ಯಕ್ರಮ ನಿರೂಪಿಸಿ, ಚಂದ್ರಕಲಾ ವಂದಿಸಿದರು.



