Thursday, June 25, 2026

spot_img

ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಿಸಲು ಪರಿಣಾಮಕಾರಿ ಕಾರ್ಯ ಅಗತ್ಯ: ರಮೇಶ್ ಕಾಂಚನ್

ಉಡುಪಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನರ ಜೀವನಮಟ್ಟ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅರ್ಹ ಫಲಾನುಭವಿಗಳು ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಪದಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಯೋಜನೆಯ ಹಣ ಮಂಜೂರಾಗುವುದಾಗಿ ಹೇಳಿ ಬ್ಯಾಂಕ್ ಖಾತೆ ಮಾಹಿತಿ ಹಾಗೂ ಒಟಿಪಿ ಪಡೆದು ಹಣ ದೋಚುವ ಘಟನೆಗಳು ವರದಿಯಾಗುತ್ತಿವೆ. ಯಾವುದೇ ಅನುಮಾನಾಸ್ಪದ ಕರೆ ಬಂದಲ್ಲಿ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಬೇಕು. ವಂಚನೆ ನಡೆದ ಒಂದು ಗಂಟೆಯೊಳಗೆ ದೂರು ನೀಡಿದಲ್ಲಿ ಹೆಚ್ಚಿನ ಪ್ರಮಾಣದ ಹಣ ಮರುಪಡೆಯುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.

ಉಡುಪಿ ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿರುವ ಮೊತ್ತದ ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದ್ದು, 2,318 ಮೃತ ಫಲಾನುಭವಿಗಳ ವಿವರಗಳನ್ನು ಶೀಘ್ರವಾಗಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಯಾವುದೇ ಹೊಸ ಮಾರ್ಗಸೂಚಿಗಳು ಹೊರಬಿದ್ದಿಲ್ಲ ಮತ್ತು ಗ್ಯಾರಂಟಿ ಯೋಜನೆಗಳು ಹಿಂದಿನಂತೆಯೇ ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದರು.

ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಅನರ್ಹರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಅಂತಹವರ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಯುವನಿಧಿ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿ ನೀಡಲು ತಾಲೂಕು ಮಟ್ಟದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ಸಭೆಯಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಫರ್ಜಾನಾ ಎಂ., ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles