Wednesday, August 26, 2026

spot_img

ಗ್ಯಾಸ್ ಏಜೆನ್ಸಿಗಳಿಗೆ ಎಲ್‌ಪಿಜಿ ಪೂರೈಕೆ ವಿಳಂಬ ತಪ್ಪಿಸಿ: ಸಂಸದ ಕೋಟ ಸೂಚನೆ

ಉಡುಪಿ : ಉಡುಪಿ ಜಿಲ್ಲೆಯ ಗ್ಯಾಸ್ ಏಜೆನ್ಸಿಗಳಿಗೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಸಮರ್ಪಕ ಹಾಗೂ ಸಮಯೋಚಿತ ಪೂರೈಕೆ ಮಾಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಅಧಿಕಾರಿಗಳಿಗೆ ಸೂಚಿಸಿದರು.ಉಡುಪಿ ಕಚೇರಿಯಲ್ಲಿ ಸಂಸದರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ವಿವಿಧ ಗ್ಯಾಸ್ ಏಜೆನ್ಸಿಗಳ ಪ್ರತಿನಿಧಿಗಳು ಭಾಗವಹಿಸಿ, ಕಳೆದ ಕೆಲವು ದಿನಗಳಿಂದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವಿಳಂಬವಾಗುತ್ತಿರುವುದರಿಂದ ಗ್ರಾಹಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದರು.

ಈ ಕುರಿತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಗ್ಯಾಸ್ ಏಜೆನ್ಸಿಗಳಿಗೆ ಅಗತ್ಯ ಪ್ರಮಾಣದಲ್ಲಿ ಸಿಲಿಂಡರ್‌ಗಳನ್ನು ಯಾವುದೇ ವಿಳಂಬವಿಲ್ಲದೆ ಪೂರೈಸಬೇಕು. ಗ್ರಾಹಕರಿಗೆ ಸಿಲಿಂಡರ್ ವಿತರಣೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯ ದೂರದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದ ಸಿಲಿಂಡರ್ ವಿತರಣೆಯ ಸಂದರ್ಭದಲ್ಲಿ ಒಟಿಪಿ ಆಧಾರಿತ ದೃಢೀಕರಣದಲ್ಲಿ ಗ್ರಾಹಕರು ಹಾಗೂ ಏಜೆನ್ಸಿಗಳು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ನೆಟ್‌ವರ್ಕ್ ಸೌಲಭ್ಯ ಸಮರ್ಪಕವಾಗಿ ಲಭ್ಯವಿಲ್ಲದ ದೂರದ ಗ್ರಾಮಗಳ ಗ್ರಾಹಕರ ಹಿತದೃಷ್ಟಿಯಿಂದ ಪ್ರಸ್ತುತ ಇರುವ ಶೇ.98ರಷ್ಟು ಒಟಿಪಿ ದೃಢೀಕರಣದ ಅವಶ್ಯಕತೆಯನ್ನು ಶೇ.80ಕ್ಕೆ ಇಳಿಸುವಂತೆ ಸಂಸದರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದರಿಂದ ನೆಟ್‌ವರ್ಕ್ ಸಮಸ್ಯೆ ಇರುವ ಗ್ರಾಮೀಣ ಪ್ರದೇಶಗಳ ಗ್ರಾಹಕರಿಗೆ ಅಡುಗೆ ಅನಿಲ ಸಿಲಿಂಡರ್ ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಜನಸಾಮಾನ್ಯರಿಗೆ ಅತ್ಯಗತ್ಯವಾಗಿರುವ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಬೇಕು. ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಸಭೆಯಲ್ಲಿ ಉಡುಪಿ ಆಹಾರ ಇಲಾಖೆಯ ಅಧಿಕಾರಿ ಪ್ರಕಾಶ್, ಐಒಸಿಎಲ್ ಮಾರಾಟ ಅಧಿಕಾರಿ ದೀಪಾ, ಕೃಷ್ಣ ಗ್ಯಾಸ್ ಏಜೆನ್ಸಿ ಮಾಲೀಕ ಗಣೇಶ್ ರಾವ್, ನಗರಸಭೆಯ ಮಾಜಿ ಸದಸ್ಯ ಕಿರಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles