Wednesday, July 1, 2026

spot_img

ಗ್ರಾಮ ಪಂಚಾಯಿತಿಗಳು, ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶಗಳನ್ನಾಗಿ ಘೋಷಿಸಲು ಜಿಲ್ಲಾಧಿಕಾರಿ ಕರೆ

ಉಡುಪಿ : ಜಿಲ್ಲೆಯ ಗ್ರಾಮ ಪಂಚಾಯಿತಿಗಳು ಹಾಗೂ ನಗರ ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶಗಳನ್ನಾಗಿ ಘೋಷಿಸಲು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ನಡೆದ ಕೋಟ್ಪಾ-2003 ಕಾಯ್ದೆ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯಾಘಾತ ಸೇರಿದಂತೆ ಅನೇಕ ಮಾರಣಾಂತಿಕ ಕಾಯಿಲೆಗಳು ಉಂಟಾಗುತ್ತವೆ. ಸಾರ್ವಜನಿಕರು ತಂಬಾಕು ಉತ್ಪನ್ನಗಳಿಂದ ದೂರವಿರುವ ಮೂಲಕ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಈಗಾಗಲೇ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳು, ಗ್ರಾಮಗಳು ಹಾಗೂ ಬಹುಮಹಡಿ ವಸತಿ ಸಮುಚ್ಚಯಗಳನ್ನು ತಂಬಾಕು ಮುಕ್ತ ಪ್ರದೇಶಗಳಾಗಿ ಘೋಷಿಸಲಾಗಿದೆ. ಇದೇ ಮಾದರಿಯಲ್ಲಿ ಹೆಚ್ಚಿನ ಗ್ರಾಮ ಪಂಚಾಯಿತಿಗಳು ಮತ್ತು ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶಗಳಾಗಿ ಘೋಷಿಸಲು ಜಾಗೃತಿ ಅಭಿಯಾನಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಅವರು ತಿಳಿಸಿದರು. ಶಾಲೆ ಹಾಗೂ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧವಾಗಿದ್ದು, ತಂಬಾಕು ಮಾರಾಟಗಾರರು ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಪರವಾನಗಿ ನೀಡುವ ಮೊದಲು ಶಾಲೆಗಳ ಸಮೀಪ ಅಂಗಡಿಗಳಿರುವುದೇ ಸೇರಿದಂತೆ ಎಲ್ಲಾ ನಿಯಮಗಳನ್ನು ಪರಿಶೀಲಿಸಿ ಮಾತ್ರ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಇದುವರೆಗೆ 33ಕ್ಕೂ ಹೆಚ್ಚು ದಿಢೀರ್ ದಾಳಿಗಳನ್ನು ನಡೆಸಿ ಕೋಟ್ಪಾ ಕಾಯ್ದೆಯ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 245ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ ಸುಮಾರು ರೂ70 ಸಾವಿರ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆ ಆವರಣದಲ್ಲಿಯೂ ಕಾಯ್ದೆ ಉಲ್ಲಂಘಿಸಿದ 31 ಪ್ರಕರಣಗಳಲ್ಲಿ ರೂ3,300 ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಜಾರಿಗೆ ಜಿಲ್ಲಾದ್ಯಂತ ದಿಢೀರ್ ತಪಾಸಣೆಗಳನ್ನು ಇನ್ನಷ್ಟು ತೀವ್ರಗೊಳಿಸಿ, ತಂಬಾಕು ನಿಯಮ ಉಲ್ಲಂಘನೆಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles