ಉಡುಪಿ : ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ಆಡಳಿತ ಅವಧಿಯಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಬಡವರ ಹಾಗೂ ದೀನ ದಲಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಸಹ ಮುಂದುವರೆಯುತ್ತಿರುವುದು ಅವರ ದೂರದೃಷ್ಠಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು. ಅವರು ನಗರದ ಮಿಷನ್ ಕಂಪೌಂಡ್‌ನ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ರಾಜ್ಯ ಕಂಡ ಅನುಭವಿ ಪ್ರಾಮಾಣಿಕ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಮ ಸಮಾಜ ನಿರ್ಮಾಣದ ರೂವಾರಿಯಾಗಿ ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಅವರುಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಡಿ.ದೇವರಾಜ ಅರಸುರವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಉಪ ಪೊಲೀಸ್ ಅಧೀಕ್ಷಕ ಡಿ.ಟಿ ಪ್ರಭು ಉಪನ್ಯಾಸ ನೀಡಿ ಮಾತನಾಡುತ್ತಾ, ಕರ್ನಾಟಕ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ ಡಿ. ದೇವರಾಜ ಅರಸು ಅವರು. ದಮನಿತರ ಅಭಿವೃದ್ಧಿಗೆ ಶ್ರಮಿಸಿದ ಶ್ರೀಮಂತ ವ್ಯಕ್ತಿತ್ವ ಅರಸು ಅವರದ್ದು. ಉಳುವವನೆ ಒಡೆಯ, ಜೀತ ಪದ್ಧತಿ ನಿರ್ಮೂಲನೆ ಕಾರ್ಯಕ್ರಮದ ಮೂಲಕ ರೈತರ ಹಾಗೂ ಬಡಜನರ ಬದುಕಿಗೆ ಆಶಾಕಿರಣವಾಗಿ, ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಮೂಲಭೂತ ಸೌಕರ್ಯ ಸೇರಿದಂತೆ ಹಾಸ್ಟೆಲ್‌ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಇವರು ನೀಡಿದ ಕೊಡುಗೆ ಅಪಾರವಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ,ಸಮ ಸಮಾಜ ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆ ಇಟ್ಟವರಲ್ಲಿ ದೇವರಾಜ ಅರಸು ಕೂಡ ಪ್ರಮುಖರು. ವಿದ್ಯಾರ್ಥಿಗಳು ತಮಗೆ ದೊರಕುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಮುಂದಿನ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದ ಅವರು, ಸಮಾಜದಲ್ಲಿ ಸಮಾನತೆ ತರುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಇದೇ ಸಂದರ್ಭದಲ್ಲಿ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್ ಖಾದರಳ್ಳಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಶಂಕರ್, ಹಿಂದುಳಿದ ವರ್ಗಗಳ ಸಂಘಟನೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಸ್ವಾಗತಿಸಿ, ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಕಾಂತ್ ಜಿ ಗುನಗಾ ನಿರೂಪಿಸಿದರೆ, ಇಲಾಖೆಯ ಲೆಕ್ಕ ಅಧೀಕ್ಷಕಿ ಸುಗುಣ ಎ ವಂದಿಸಿದರು.