ಉಡುಪಿ: ಜಿಲ್ಲೆಯ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ನಡೆದ ಡೇವಿಡ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣದ ಪ್ರಮುಖ ಆರೋಪಿಗಳಲ್ಲೊಬ್ಬನಾದ ಬಿಹಾರ ಮೂಲದ ಸೂರಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಆರೋಪಿಗಳಾದ ಚಿರಾಗ್ ಹಾಗೂ ಇರ್ಷಾದ್, ಶೂಟರ್ ರಾಜುವಿಗೆ ನೀಡಬೇಕಿದ್ದ ಹಣವನ್ನು ಸೂರಜ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು ಎನ್ನಲಾಗಿದೆ. ಆರೋಪಿಗಳ ಬ್ಯಾಂಕ್ ಖಾತೆಗಳ ವಹಿವಾಟು ಹಾಗೂ ಮೊಬೈಲ್ ಕರೆಗಳ ಪರಿಶೀಲನೆ ವೇಳೆ ಸೂರಜ್ಗೆ ಸಂಬಂಧಿಸಿದ ಮಹತ್ವದ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಈ ಸುಳಿವಿನ ಆಧಾರದಲ್ಲಿ ತನಿಖಾ ತಂಡ ಬಾಂಬೆ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಿ ಕಾರ್ಯಾಚರಣೆ ನಡೆಸಿ ಸೂರಜ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಸೂರಜ್ನನ್ನು ಗುರುವಾರ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶ ಎಂ. ಪುರುಷೋತ್ತಮ್ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಬಂಧಿತರಾಗಿದ್ದು, ಸೂರಜ್ ಬಂಧನದೊಂದಿಗೆ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಹಣದ ವಹಿವಾಟು ಹಾಗೂ ಹತ್ಯೆಯ ಸಂಚಿನಲ್ಲಿ ಆರೋಪಿಗಳ ಪಾತ್ರದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.



