ಉಡುಪಿ : ಅಕಸ್ಮಾತ್ ವೈಮಾನಿಕ ದಾಳಿ ಸಂಭವಿಸಿದರೆ ಯಾವ ರೀತಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಬೇಕು ಎಂಬುದರ ಕುರಿತು ನಗರದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಅಣಕು ಪ್ರದರ್ಶನ ನಡೆಸಲಾಯಿತು.

ಅಣಕು ಕಾರ್ಯಾಚರಣೆಯಲ್ಲಿ ದಾಳಿಯಿಂದ ವಿದ್ಯಾರ್ಥಿಗಳು ಗಾಯಗೊಂಡು ಮೂರ್ಛೆ ಬಿದ್ದ ದೃಶ್ಯ, ಗಾಯಾಳುಗಳಿಗೆ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ರೀತಿ, ಗೃಹರಕ್ಷಕ ದಳದ ಸಿಬ್ಬಂದಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ ಕಾರ್ಯಾಚರಣೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ ದೃಶ್ಯಗಳು ಗಮನ ಸೆಳೆದವು.

ಅಗ್ನಿಶಾಮಕ ಇಲಾಖೆ, ಗೃಹರಕ್ಷಕ ದಳ, ಪೊಲೀಸ್ ಇಲಾಖೆ, ಕರಾವಳಿ ಕಾವಲು ಪಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೆಡ್ ಕ್ರಾಸ್, ಲಯನ್ಸ್ ಕ್ಲಬ್, ಹಳೆ ವಿದ್ಯಾರ್ಥಿ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ವೀಕ್ಷಿಸಿ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಇಂತಹ ಅಣಕು ಪ್ರದರ್ಶನಗಳು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸುವ ಬಗ್ಗೆ ಪ್ರಾಯೋಗಿಕ ಅನುಭವ ನೀಡುತ್ತವೆ ಎಂದರು.

ಅವಘಡದ ಸಂದರ್ಭಗಳಲ್ಲಿ ಸಾರ್ವಜನಿಕರು ರಕ್ಷಣಾ ಕಾರ್ಯಕ್ಕೆ ಸಹಕರಿಸಬೇಕು. ಅನಗತ್ಯವಾಗಿ ವಿಡಿಯೊ ಚಿತ್ರೀಕರಣ ನಡೆಸುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಬಾರದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ಗೃಹರಕ್ಷಕ ದಳದ ಕಮಾಂಡೆಂಟ್ ಡಾ. ರೋಷನ್ ಶೆಟ್ಟಿ, ಸೆಕೆಂಡ್ ಇನ್ ಕಮಾಂಡೆಂಟ್ ಕೆ.ಸಿ. ರಾಜೇಶ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಉ. ಕಲ್ಗಟಕರ, ಪೌರ ರಕ್ಷಣಾ ದಳದ ಕಮಾಂಡಿಂಗ್ ಅಧಿಕಾರಿ ಡಾ. ವಿಜಯೇಂದ್ರ ರಾವ್, ರೆಡ್ ಕ್ರಾಸ್ ಘಟಕದ ಸಂಚಾಲಕ ಪ್ರಶಾಂತ್ ಎನ್., ಲಯನ್ಸ್ ಕ್ಲಬ್ ಅಧ್ಯಕ್ಷ ದಿನೇಶ್ ಕಿಣಿ ಹಾಗೂ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಉಪಸ್ಥಿತರಿದ್ದರು. ಗೃಹರಕ್ಷಕ ದಳದ ಸಿಬ್ಬಂದಿ ಸ್ಟೀವನ್ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.



